

Girl: ಬಾಲಸೋರ್‌ನಲ್ಲಿ ಲೈಂಗಿಕ ಕಿರುಕುಳದಿಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಒಡಿಶಾದಲ್ಲಿ ಮತ್ತೊಂದು ದುಷ್ಕೃತ್ಯ ನಡೆದಿದೆ. ಶನಿವಾರ, ಪುರಿ ಜಿಲ್ಲೆಯ ಬಾಬರ್ ಗ್ರಾಮದಲ್ಲಿ ಮೂವರು ದುಷ್ಕರ್ಮಿಗಳು 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಆಕೆಯ ಸ್ನೇಹಿತನ ಮನೆಗೆ ಹೋಗುತ್ತಿದ್ದ ವೇಳೆ ಹಾಡಹಗಲೇ ನಡು ರಸ್ತೆಯಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಭುವನೇಶ್ವರದ ಏಮ್ಸ್‌ಗೆ ದಾಖಲಿಸಿದ್ದಾರೆ.
ಈ ಘಟನೆ ಕುರಿತಾಗಿ ಒಡಿಶಾ ಡಿಸಿಎಂ ಪ್ರವತಿ ಪರಿದಾ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಘಟನೆ ಬಗ್ಗೆ ತೀವ್ರವಾಗಿ ಖಂಡಿಸಿದ್ದಾರೆ. ‘ರಸ್ತೆಯಲ್ಲಿ ನಡೆಯುತ್ತಿದ್ದ ಹುಡುಗಿಯ ಮೇಲೆ ಮೂವರು ವ್ಯಕ್ತಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ, ಬಾಲಕಿಯನ್ನು ರಕ್ಷಿಸಿ ಏಮ್ಸ್‌ಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಸರ್ಕಾರವೇ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ. ತಕ್ಷಣ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದ್ದೇನೆ’ ಎಂದು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಬಲಂಗ ಪೊಲೀಸರು ಭೇಟಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬಾಲಸೋರ್ ಘಟನೆ
ಬಾಲಸೋರ್‌ನ ಫಕೀರ್ ಮೋಹನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಜೂನ್ 12 ರಂದು ತನ್ನ ಶಿಕ್ಷಕರ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆ ದೇಶಾದ್ಯಂತ ಸಂಚಲನ ಸೃಷ್ಟಿಸಿತು. ಘಟನೆಗೆ ಸಂಬಂಧಿಸಿದಂತೆ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಬಂಧಿಸಲಾಗಿದೆ. ಯುಜಿಸಿ ಸತ್ಯಶೋಧನಾ ಸಮಿತಿ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ.