More

    ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಅಪಾರ ಅನುದಾನ – ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ

    ವಿಜಯವಾಣಿ ಸುದ್ದಿಜಾಲ ದೇವದುರ್ಗ
    ಜಿಲ್ಲೆಯ ಜನರ ಆಶೋತ್ತರಗಳಿಗೆ ಕೇಂದ್ರ ಸರ್ಕಾರ ಬೆನ್ನೆಲುಬಾಗಿ ನಿಂತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಡದ ಮಧ್ಯೆಯೂ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವ ಪ್ರಯತ್ನ ಮಾಡಿದ್ದಾರೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

    ತಾಲೂಕಿನ ಗಬ್ಬೂರು ಗ್ರಾಮದಲ್ಲಿ 4,283 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡುವ ಮೂಲಕ ಜನರ ಪ್ರೀತಿಗೆ ಪಾತ್ರವಾಗಿದೆ ಎಂದರು. ಜಲ ಜೀವನ ಮಿಷನ್ ಮತ್ತು ಜಲಧಾರೆ ಯೋಜನೆಯಡಿ ಜಿಲ್ಲೆಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ದೇವದುರ್ಗ ಕ್ಷೇತ್ರದಲ್ಲಿ ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಕಾಲೇಜು, ಎಂಟು ಪ್ರಾಥಮಿಕ ಆರೋಗ್ಯ ಕೇಂದ್ರಗಳು, 3 ವಿದ್ಯುತ್ ವಿತರಣಾ ಕೇಂದ್ರಗಳು ಹಾಗೂ ಕೃಷ್ಣಾ ನದಿ ತೀರದ ಹಳ್ಳಿಗಳಿಗೆ ನೀರುಣಿಸಲು 8 ಏತ ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ.

    ತಿಂಥಣಿ ಬ್ರಿಡ್ಜ್ ಹತ್ತಿರ ಜಲಾಶಯ ನಿರ್ಮಾಣ ಮತ್ತು ಅರಕೇರಾ ಬಳಿ ಏತ ನೀರಾವರಿ ಯೋಜನೆ ಜಾರಿಗೊಳಿಸುವ ಆಶಯವಿದೆ. ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿವೆ. ದೇಶದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್ ನಂತರ ಅಮಿತ್ ಷಾ ದಕ್ಷ ಹಾಗೂ ಡೈನಾಮಿಕ್ ರಾಜಕಾರಣಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎನ್ನುವುದು ಜನರ ಬೇಡಿಕೆಯಾಗಿದ್ದು, ಗೃಹ ಸಚಿವರು ಈಡೇರಿಸುವ ಭರವಸೆಯಿದೆ ಎಂದು ಕೆ.ಶಿವನಗೌಡ ನಾಯಕ ಹೇಳಿದರು.

    ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದೇ ರಾಷ್ಟ್ರ ಎಂದು ಹೇಳಲು ಹೆಮ್ಮೆ ಎನ್ನಿಸುತ್ತಿದೆ. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಕಾರಣರಾಗಿದ್ದಾರೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಹತ್ವಾಕಾಂಕ್ಷಿ ಜಿಲ್ಲೆಗಳೆಂದು ಘೋಷಣೆ ಮಾಡುವ ಮೂಲಕ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಜಿಲ್ಲೆಗೆ ಏಮ್ಸ್ ಮಂಜೂರು ಮಾಡಬೇಕು ಎನ್ನುವುದು ಜಿಲ್ಲೆಯ ಜನರ ಬೇಡಿಕೆಯಾಗಿದ್ದು, ತುಂಗಭದ್ರಾ ಎಡದಂಡೆ ಕಾಲುವೆ ಕೊನೆಯ ಭಾಗದ ರೈತರ ಸಮಸ್ಯೆ ನಿವಾರಣೆಗಾಗಿ ಕೇಂದ್ರ ಸರ್ಕಾರ ಎನ್‌ಆರ್‌ಬಿಸಿಯಂತೆ ಕಾಡಾ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

    ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಡಾ.ಶಿವರಾಜ ಪಾಟೀಲ್, ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್, ತುಂಗಭದ್ರಾ ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಎಂಎಲ್ಸಿ ಪ್ರತಾಪಸಿಂಹ ನಾಯಕ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ ಉಪಸ್ಥಿತರಿದ್ದರು.

    ಮಹಾವೀರ ಮೂರ್ತಿ ಕೊಡುಗೆ
    ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲು ಗಬ್ಬೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಶಾಸಕ ಕೆ.ಶಿವನಗೌಡ ನಾಯಕ ಬೆಳ್ಳಿಯಿಂದ ತಯಾರಿಸಿದ ಭಗವಾನ್ ಮಹಾವೀರ ಮೂರ್ತಿಯಿದ್ದ ಸ್ಮರಣಿಕೆ ನೀಡಿ ಸನ್ಮಾನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts