ರೇವಣ್ಣ ವಿರುದ್ಧ ಹಕ್ಕುಚ್ಯುತಿ ಮಂಡಿಸುವೆ

 ಹಾಸನ:ಕ್ಷೇತ್ರ ಅಭಿವೃದ್ಧಿ ವಿಚಾರದಲ್ಲಿ ನನ್ನನ್ನು ನಿರ್ಲಕ್ಷೃ ಮಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ  ಮಂಡಿಸುತ್ತೇನೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.

ಹಾಸನ ತಾಲೂಕಿನ ಅಭಿವೃದ್ಧಿ ಕಾಮಗಾರಿ ಬಗ್ಗೆ ನನ್ನೊಂದಿಗೆ ಚರ್ಚೆ ನಡೆಸುತ್ತಿಲ್ಲ. ವಿಮಾನ ನಿಲ್ದಾಣ ಕಾಮಗಾರಿ ಸಂಬಂಧ ಈಚೆಗೆ ನಡೆದ ಸಭೆಯ ಮಾಹಿತಿಯನ್ನೇ ನನಗೆ ನೀಡಿಲ್ಲ. ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಅಭಿವೃದ್ಧಿ ವಿಚಾರದಲ್ಲಿ ನನ್ನನ್ನು ನಿರ್ಲಕ್ಷೃ ಮಾಡುತ್ತಿರುವ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಈಗಾಗಲೇ ಪತ್ರ ಬರೆದಿದ್ದೇನೆ ಎಂದರು.
ಯಾವುದೇ ಸಭೆ ಸಮಾರಂಭಗಳಿಗೆ ನನ್ನನ್ನು ಕರೆಯದೆ ಮನಸೋಇಚ್ಛೆ ವರ್ತಿಸುತ್ತಿದ್ದಾರೆ. ಸಚಿವರ ತಾಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಈ ರೀತಿಯ ವರ್ತನೆ ಬಿಡದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಹಾಸನದಲ್ಲಿ ಪ್ರಜಾಪ್ರಭುತ್ವ ಇದೆಯೋ ಅಥವಾ ಇಲ್ಲವೋ ಎಂಬುದು ಅರ್ಥವಾಗುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಲ್ಲಿನ ಶಾಸಕರ ಜತೆ ಮಾತನಾಡಬೇಕು. ಆದರೆ ಸಚಿವ ರೇವಣ್ಣ ತಾವೇ ಪರಮ ಜ್ಞಾನಿ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಬಸ್ ನಿಲ್ದಾಣ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಆರಂಭದ ಮಾಹಿತಿ ನೀಡದೆ ಶಾಸಕ ಸ್ಥಾನಕ್ಕೆ ಅಗೌರವ ಉಂಟು ಮಾಡಿದ್ದಾರೆ. ಸಚಿವರ ಹಾಗೂ ಕೆಲ ಅಧಿಕಾರಿಗಳ ವರ್ತನೆ ಖಂಡಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದರು.

ಗುತ್ತಿಗೆದಾರರು ಕೂಡ ಸಚಿವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಚಿವ ರೇವಣ್ಣ ಸಾಯುವವರೆಗೆ ಇದೇ ಸ್ಥಾನದಲ್ಲಿ ಭದ್ರವಾಗಿರುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಇವರ ಆಟಾಟೋಪ ಬಹಳ ದಿನ ನಡೆಯುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.