More

    ಮಳೆ ಹಾನಿ ವೀಕ್ಷಿಸಿದ ಶಾಸಕ ಶ್ರೀನಿವಾಸ ಮಾನೆ

    ಹಾನಗಲ್ಲ: ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಹಾನಿ ಪೀಡಿತ ಪ್ರದೇಶಗಳಿಗೆ ಶಾಸಕ ಶ್ರೀನಿವಾಸ ಮಾನೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

    ಗ್ರಾಮದ ಹೊಸಕೆರೆ ಕೋಡಿ ಒಡೆದು ಕೆರೆ ಕೆಳಗಿನ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡು ಬೆಳೆ ನಾಶ ಸಂಭವಿಸಿರುವುದನ್ನು ವೀಕ್ಷಿಸಿದರು. ‘ಕೆರೆ ನೀರು ನುಗ್ಗಿರುವುದರಿಂದ ಬೆಳೆಗಳೆಲ್ಲ ಕೊಚ್ಚಿ ಹೋಗಿವೆ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತಾಗಿದೆ. ಮೊದಲೇ ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇವೆ. ಮಳೆ ಗಾಯದ ಮೇಲೆ ಬರೆ ಎಳೆದಿದೆ’ ಎಂದು ರೈತರು ಅಳಲು ತೋಡಿಕೊಂಡರು. ತಾಲೂಕಿನಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ವರದಿ ಸಿದ್ಧಪಡಿಸಲಾಗುತ್ತಿದೆ. ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾನೆ ತಿಳಿಸಿದರು.

    ಗ್ರಾಮದ ಹಲವು ಬಡಾವಣೆಗಳಿಗೆ ನೀರು ನುಗ್ಗಿ ಮನೆಗಳಿಗೆ ಹಾನಿಯಾಗಿರುವುದನ್ನು ವೀಕ್ಷಿಸಿದ ಮಾಣೆ, ಹರಿಹರ-ಸಮ್ಮಸಗಿ ರಸ್ತೆಯ ಸೇತುವೆ ಮೇಲೆ ನೀರು ಹರಿದು ಸಂಚಾರ ವ್ಯತ್ಯಯವಾಗಿರುವುದನ್ನು ಪರಿಶೀಲಿಸಿದರು. ಬೆಳೆ ಮತ್ತು ಮನೆ ಹಾನಿ ವಿಷಯದಲ್ಲಿ ನಿರ್ಲಕ್ಷ್ಯ ಮಾಡದೇ ಸಮೀಕ್ಷೆ ನಡೆಸಿ, ಸಂತ್ರಸ್ತರಿಗೆ ಅನುಕೂಲ ಮಾಡಿಕೊಡಿ. ಈ ವಿಚಾರದಲ್ಲಿ ಬೇಜವಾಬ್ದಾರಿ ಸಹಿಸುವುದಿಲ್ಲ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಮುಖಂಡರಾದ ಶಿವಾನಂದಪ್ಪ ಈಳಿಗೇರ, ಮಲ್ಲಿಕಾರ್ಜುನಗೌಡ ಪಾಟೀಲ, ಮಹದೇವಪ್ಪ ಬ್ಯಾಡಗಿ, ರಾಜೇಂದ್ರ ರೆಡ್ಡೇರ, ಹರೀಶ ಈಳಿಗೇರ, ನನ್ನೆಸಾಬ ಹಾನಗಲ್ಲ, ನಾಸೀರಸಾಬ ಬೇಪಾರಿ, ಈರಪ್ಪ ಕುಮಶಿ, ವೀರೇಶ ಭಜಂತ್ರಿ ಇನ್ನಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts