ಮದ್ದೂರು: ಬೆಂಗಳೂರಿನಲ್ಲಿ ಬೆಲೆ ಏರಿಕೆ ಬಗ್ಗೆ ಬಿಜೆಪಿಯಿಂದ ನಡೆಸುತ್ತಿರುವ ಧರಣಿಗೆ ಯಾವುದೇ ಅರ್ಥವಿಲ್ಲ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಯಾವುದೇ ಬೆಲೆ ಏರಿಕೆ ಮಾಡಿಲ್ಲವೇ? ನಾವು ಚಿಕ್ಕವರಿದ್ದಾಗ 10 ರೂ.ಗೆ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದೆವು, ಈಗಲೂ ಅಷ್ಟೇ ಇದೆಯೇ? ಆಗಿನಿಂದ ಬಂದ ಸರ್ಕಾರಗಳು ಬೆಲೆ ಏರಿಕೆ ಮಾಡಿಲ್ಲವೇ, ಕೇವಲ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವುದಕ್ಕೆ ಬೀದಿ ನಾಟಕ ಮಾಡುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮುಡಾ ಪ್ರಕರಣದ ವಿಷಯದಲ್ಲಿ ಲೋಕಾಯುಕ್ತ ವರದಿಯನ್ನು ಮರುಪರಿಶೀಲನೆ ಮಾಡಲು ಇ.ಡಿ. ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಡಿ ನೈಟ್‌ಬೀಟ್ ಪೊಲೀಸ್ ಇದ್ದ ಹಾಗೆ. ಈ ಬಗ್ಗೆ ಮುಖ್ಯಮಂತ್ರಿಗಳು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ ಬಗ್ಗೆ ಪಕ್ಷ ವಿರೋಧಿ ವಿಷಯದಲ್ಲಿ ಕ್ರಮ ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ನಡೆದ ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿಯ ಎಸ್.ಪಿ.ಸ್ವಾಮಿ ಅವರ ಪರ ಕೆಲಸ ಮಾಡಿದ್ದಾರೆ. ಅದಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ಯಾರೆಂಟಿ ಅನುಷ್ಠಾನ ಮಂಡಳಿಯ ತಾಲೂಕು ಅಧ್ಯಕ್ಷ ಬಸವರಾಜು ಇದ್ದರು.