

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ (Border-Gavaskar Trophy) ಟೆಸ್ಟ್ ಸರಣಿಯ ಮೊದಲ ಪಂದ್ಯ ಹೊರತುಪಡಿಸಿದರೆ ಉಳಿದ ಮ್ಯಾಚ್ಗಳಲ್ಲಿ ಭಾರತ ತಂಡ ಹೇಳಿಕೊಳ್ಳುವಂತಹ ಪ್ರದರ್ಶವನ್ನು ನೀಡಿಲ್ಲ. ಈ ಎಲ್ಲಾ ವಿಚಾರಗಳು ಆಡಳಿತ ಮಂಡಳಿಯ ನಿದ್ದೆ ಕೆಡಿಸಿರುವ ನಡುವೆಯೇ ತಂಡಕ್ಕೆ ಅನುಭವಿ ಆಟಗಾರರ ಅವಶ್ಯಕತೆ ಬಗ್ಗೆ ಕ್ರೀಡಾ ಪಂಡಿತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದು, ಮೊಹಮ್ಮದ್ ಶಮಿ (Mohammed Shami) ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದಾರೆ. ಶಮಿ ತಂಡಕ್ಕೆ ವಾಪಸ್ ಆಗುತ್ತಾರೆ ಎಂಬ ಸುದ್ದಿಯ ನಡುವೆಯೇ ಬಿಸಿಸಿಐ ಆಘಾತಕಾರಿ ಸುದ್ದಿಯೊಂದನ್ನು ಹಂಚಿಕೊಂಡಿದ್ದು, ಈ ವಿಚಾರ ಕೇಳಿ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
2023ರ ಏಕದಿನ ವಿಶ್ಚಕಪ್ ಬಳಿಕ ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಗುಳಿದಿರುವ ಶಮಿ (Mohammed Shami) ಸದ್ಯ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿದ್ದು, ಅವರಿಗೆ ಇನ್ನೂ ಎನ್ಸಿಎಯಿಂದ ಸಂಪೂರ್ಣವಾಗಿ ಫಿಟ್ನೆಸ್ ಸರ್ಟಿಫಿಕೆಟ್ ನೀಡಲಾಗಿಲ್ಲ. ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಕಾಣಿಸಿಕೊಂಡಿರುವ ಶಮಿ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸದಟದದ ಸರಣಿಯ ಉಳಿದೆರಡು ಪಂದ್ಯಗಳಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಬಿಸಿಸಿಐ ಕೂಡ ಒಂದು ಸುತ್ತಿನ ಸಭೆ ನಡೆಸಿತ್ತು. ಇದೀಗ ಶಮಿ ಫಿಟ್ನೆಸ್ ಕುರಿತಾಗಿ ಅಪ್ಡೇಟ್ ಒಂದು ಹೊರಬಿದ್ದಿದ್ದು, ಸದ್ಯಕ್ಕೆ ತಂಡ ಕೂಡಿಕೊಳ್ಳದಿರುವುದು ಪಕ್ಕಾ ಆಗಿದೆ.
ಈ ಕುರಿತು ಮಾತನಾಡಿರುವ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, ಶಮಿ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಆದರೆ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಕೊನೆಯ ಎರಡು ಟೆಸ್ಟ್ಗಳಿಗೆ ಅವರನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ಹಿಮ್ಮಡಿ ನೋವಿನಿಂದ ಬಳಲುತ್ತಿದ್ದ ಶಮಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ನಿರಂತರ ಬೌಲಿಂಗ್ ಮಾಡಿದ ಪರಿಣಾಮ ಎಡ ಮೊಣಕಾಲಿನಲ್ಲಿ ಊತ ಬರಲು ಶುರುವಾಗಿದೆ. ಈ ಕಾರಣಕ್ಕೆ ವೈದ್ಯಕೀಯ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿನ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಅವರನ್ನು ಫಿಟ್ ಎಂದು ಪರಿಗಣಿಸಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಆಡುತ್ತಿಲ್ಲ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.