ಮಕ್ಕಳ ಆರೋಗ್ಯ ಮೇಳೆ ನಿಗಾ ವಹಿಸಿ

Monitor children's health closely.
ವಿಜಯಪುರ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ರಿಷಿ ಆನಂದ ಮಾತನಾಡಿದರು. ನಿಂಗಪ್ಪ ಗೋಠೆ, ಡಾ. ಶಿವಾನಂದ ಮಾಸ್ತಿಹೊಳಿ ಮತ್ತಿತರರಿದ್ದಾರೆ.
Published on

ವಿಜಯಪುರ: ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಆರೋಗ್ಯ ತಪಾಸಣೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚಿಸಿದರು.

ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳು ಸೇರಿ ರಾಷ್ಟ್ರೀಯ ಬಾಲ ಸ್ವಾಸ್ಥ, ರಾಷ್ಟ್ರೀಯ ಕಿಶೋರ ಸ್ವಾಸ್ಥ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್​ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಶಾಲೆಯಲ್ಲಿ ಆರೋಗ್ಯ ತಪಾಸಣೆಯ ದಾಖಲಾತಿ ವಹಿ ನಿರ್ವಹಿಸಬೇಕು. ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿರುವ ಮಕ್ಕಳ ಆರೋಗ್ಯ ನಿಯಮಿತವಾಗಿ ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಮಕ್ಕಳಿಗೆ ಅನಿಮಿಯಾ ಕುರಿತು ಮಾಹಿತಿ ನೀಡಿ, ಪ್ರತಿ ಸೋಮವಾರ ಕಬ್ಬಿಣಾಂಶದ ಮಾತ್ರೆಯನ್ನು ಎಲ್ಲ ಮಕ್ಕಳು ಸೇವನೆ ಮಾಡಲು ಪ್ರೇರೆಪಿಸಬೇಕು. ಅಪೌಷ್ಠಿಕ ಮಕ್ಕಳ ಮಾಹಿತಿಯನ್ನು ಕ್ರೋಢಿಕರಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಬೇಕು ಎಂದರು.

ರಾಷ್ಟ್ರೀಯ ಪ್ಲೋರೋಸಿಸ್​ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್​ ಅಂಶ ಹೆಚ್ಚಿರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಟಕಗಳ ಪ್ರಸ್ತುತ ಕಾರ್ಯನಿರ್ವಹಣಾ ವರದಿ ಸಲ್ಲಿಸಬೇಕು. ಅವಶ್ಯಕತೆವಿರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಟಕಗಳನ್ನು ತುರ್ತಾಗಿ ಸ್ಥಾಪಿಸಲು ಕ್ರಿಯಾಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ಕೆ.ಡಿ. ಗುಂಡಬಾವಡಿ, ವಿವಿಧ ಕಾರ್ಯಕ್ರಮಗಳ ಕುರಿತ ಪ್ರಗತಿ ಹಾಗೂ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳ ಜವಾಬ್ದಾರಿಗಳ ಕುರಿತು ಸಭೆಗೆ ವಿವರಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಡಿಎಚ್​ಒ ಡಾ. ಸಂಪತ್​ ಗುಣಾರಿ, ಜಿಲ್ಲಾ ಶಸ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ. ಚವಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net