More

    ಸೋಂಕು ಹತೋಟಿಗೆ ನಿಗಾ ವಹಿಸಿ

    ಗದಗ: ಕರೊನಾ ಸೋಂಕು ನಿಯಂತ್ರಣಕ್ಕೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಸೋಂಕು ಹತೋಟಿಗೆ ಅಧಿಕಾರಿಗಳು ನಿಗಾವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಹೇಳಿದರು.

    ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸದ್ಯ ಜಿಲ್ಲೆಯಲ್ಲಿ ಕರೊನಾ ಸೋಂಕು ಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಾದರೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಳ್ಳಬೇಕು ಎಂದರು.

    ಸಾರ್ವಜನಿಕರಿಗೆ, ಸೋಂಕಿತರಿಗೆ ಕರೊನಾ ಹಾಗೂ ಚಿಕಿತ್ಸೆ ಕುರಿತು ಸಹಾಯವಾಣಿ ಮೂಲಕ ನಿಖರ ಮಾಹಿತಿ ಒದಗಿಸಬೇಕು. ಹೋಮ್ ಕ್ವಾರಂಟೈನ್​ನಲ್ಲಿರುವವರಿಗೆ ಆಗಾಗ ತಪಾಸಣೆ ಮಾಡುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದರು.

    ಜಿಲ್ಲೆಯಲ್ಲಿ ಕಾಲೇಜುಗಳು ಆರಂಭವಾಗಿದ್ದು ಆದ್ಯತೆ ಮೇರೆಗೆ ಕಾಲೇಜುಗಳಿಗೆ ತೆರಳಿ ಅಲ್ಲಿಯೇ ಗಂಟಲದ್ರವ ಮಾದರಿ ಸಂಗ್ರಹಿಸಿ ತಕ್ಷಣ ವರದಿ ನೀಡುವ ಮೂಲಕ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಅನುಕೂಲ ಮಾಡಿಕೊಡಬೇಕು ಎಂದು ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಆನ್​ಲೈನ್​ನಲ್ಲಿ ನೋಂದಣಿ ಕಾರ್ಯ ಹಾಗೂ ಪ್ರವಾಹ, ಮಳೆಯಿಂದ ಹಾನಿಗೊಳಗಾದ ಮನೆಗಳ ಸರ್ವೆ ಕಾರ್ಯ ನಡೆಸಿ ಮಾರ್ಗಸೂಚಿಗಳನ್ವಯ ಪರಿಹಾರ ವಿತರಣೆಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

    ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶವು ಕಡಿಮೆಯಾಗಿದ್ದು ಪ್ರಸಕ್ತ ಸಾಲಿನ ಫಲಿತಾಂಶವು ಉತ್ತಮಗೊಳಿಸಲು ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿ ಶೈಕ್ಷಣಿಕ ಪ್ರಗತಿ ಸಾಧನೆಗೆ ಮುಂದಾಗಬೇಕು. ಅಲ್ಲದೆ, ಜಿಲ್ಲಾ ಮಟ್ಟದ ಅಧಿಕಾರಿಗಳು ನಿಯಮಿತವಾಗಿ ಶಾಲೆ ಆರಂಭವಾದ ನಂತರ ಭೇಟಿ ನೀಡಿ ಸೂಕ್ತ ಸಲಹೆ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು ಎಂದರು.

    ಸಭೆಗೂ ಮುನ್ನ ಅಪರ ಜಿಲ್ಲಾಧಿಕಾರಿ ಎಂ. ಸತೀಶಕುಮಾರ ಅವರು ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಇದ್ದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್​ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ, ಉಪಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಮತ್ತಿತರರು ಇದ್ದರು.

    ರುದ್ರಭೂಮಿ ಒದಗಿಸಿ

    ಜಿಲ್ಲೆಯ ಪ್ರತಿ ಗ್ರಾಮಕ್ಕೂ ಮೂಲ ಸೌಕರ್ಯಗಳ ಜತೆ ರುದ್ರಭೂಮಿಯನ್ನು ಒದಗಿಸಬೇಕು. ಜಿಲ್ಲೆಯ 111 ಗ್ರಾಮಗಳಲ್ಲಿ ರುದ್ರ ಭೂಮಿಯ ಅಗತ್ಯವಿದ್ದು ಸದ್ಯದಲ್ಲಿಯೇ ಗ್ರಾಮದ ಹತ್ತಿರದ ಸರ್ಕಾರಿ ಭೂಮಿಯನ್ನು ಗುರುತಿಸಿ ಮಂಜೂರಾತಿ ನೀಡಬೇಕು. ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚಿಸಿದರು.

    ಬಡವರಿಗೆ ಉಚಿತ ಸೇವೆ ಸಿಗಲಿ

    ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ 30 ಸಾವಿರ ಕಾರ್ಡ್​ಗಳನ್ನು ವಿತರಿಸಲಾಗಿದೆ. ಅರ್ಹ ಎಲ್ಲರಿಗೂ ಕಾರ್ಡ್ ತಲುಪುವಂತೆ ಕ್ರಮ ವಹಿಸಬೇಕು. ಈ ಮೂಲಕ ಜಿಲ್ಲೆಯ ಬಡವರಿಗೆ ಉಚಿತ ಆರೋಗ್ಯ ಸೇವೆ ದೊರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts