More

    ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ

    ರಾಯಚೂರು: ಮುಂಗಾರು ಆರಂಭವಾಗಲಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಇದರಿಂದಾಗಿ ಜನರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಶನಿವಾರ ಮಾತನಾಡಿದರು. ಹವಾಮಾನ ಇಲಾಖೆ ಮಾಹಿತಿಯಂತೆ 2022ನೇ ಸಾಲಿನಲ್ಲಿ ವಾಡಿಕೆಗಿಂತ ಶೇ.29 ಹೆಚ್ಚಿನ ಮಳೆಯಾಗಿದ್ದು, ಈ ಬಾರಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದರು.

    ಮಳೆಯಿಂದಾಗುವ ಹಾನಿ ಪರಿಸ್ಥಿತಿ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಹೆಚ್ಚಿನ ಮಳೆಯಾದಲ್ಲಿ ಬ್ಯಾರೇಜ್‌ಗಳಲ್ಲಿ ನೀರಿನ ಹರಿವು ಪ್ರಮಾಣ ಹೆಚ್ಚಳವಾಗಲಿದ್ದು, ಮುಂಜಾಗ್ರತೆ ವಹಿಸಿ ಗೇಟ್ ತೆರೆದು ನೀರು ಬಿಡುವ ವ್ಯವಸ್ಥೆ ಮಾಡಿಕೊಳ್ಳಬೇಕು. ತಹಸೀಲ್ದಾರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿರುವುದರಿಂದ ನಿಭಾಯಿಸಲು ಸನ್ನದ್ಧರಾಗಬೇಕು.

    ನಗರದಲ್ಲಿನ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಿ ತ್ಯಾಜ್ಯ ಸರಾಗವಾಗಿ ಹರಿದು ಹೋಗುವಂತೆ ಕ್ರಮಕೈಗೊಳ್ಳಬೇಕು. ತಗ್ಗು ಪ್ರದೇಶಗಳಲ್ಲಿರುವ ಬಡಾವಣೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ತಾಕೀತು ಮಾಡಿದರು.

    ಬೆಳೆ ಹಾನಿಗೆ ಸಂಬಂಧಿಸಿದಂತೆ ಯಾವುದೇ ಲೋಪದೋಷವಾಗದಂತೆ ಪರಿಹಾರ ಸಿಗುವ ವ್ಯವಸ್ಥೆ ಮಾಡಬೇಕು. ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಕುರಿತು ರೈತರಿಗೆ ಮಾಹಿತಿ ಒದಗಿಸಬೇಕು. ಎಲ್ಲ ಅಧಿಕಾರಿಗಳು ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಚಂದ್ರಶೇಖರ ನಾಯಕ ಸೂಚಿಸಿದರು.

    ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ ಶಿಂಧೆ, ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಶಪ್ಪ, ತಹಸೀಲ್ದಾರ್ ಚನ್ನಮಲ್ಲಪ್ಪ ಗಂಟಿ, ಡಿಎಚ್‌ಒ ಡಾ.ಸುರೇಂದ್ರಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts