More

    ಹೊಸ ಕಾಮಗಾರಿಗಳಿಗೆ ಆದ್ಯತೆ, ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ದಿನಕರ ಬಾಬು ಹೇಳಿಕೆ

    ಉಡುಪಿ: ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಹಿಂದಿನ ಕಾಮಗಾರಿಗಳ ಬಾಕಿ ಮೊತ್ತ ಪಾವತಿಗೆ ಹೆಚ್ಚಿನ ಅನುದಾನ ವ್ಯಯಿಸದೆ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮುಕ್ತಾಯಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ.

    ಜಿಪಂ ಸಭಾಂಗಣದಲ್ಲಿ ಶುಕ್ರವಾರ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿ.ಪಂ. ಅನುದಾನದಲ್ಲಿ ಹೆಚ್ಚಿನ ಮೊತ್ತವನ್ನು ಹಿಂದಿನ ವರ್ಷದ ಕಾಮಗಾರಿಗಳ ಬಾಕಿ ಮೊತ್ತ ಪಾವತಿಗೆ ಬಳಸುತ್ತಿರುವುದರಿಂದ ಪ್ರಸಕ್ತ ವರ್ಷದಲ್ಲಿ ಕೈಗೊಳ್ಳಬೇಕಾದ ನೂತನ ಕಾಮಗಾರಿಗಳ ಪ್ರಗತಿಗೆ ತೊಡಕಾಗುತ್ತಿದ್ದು, ಸಾರ್ವಜನಿಕರಿಗೆ ಹೊಸ ಯೋಜನೆಗಳ ಪ್ರಯೋಜನ ದೊರೆಯುತ್ತಿಲ್ಲ. ಇನ್ನು ಪ್ರತಿವರ್ಷ ನಿಗದಿಪಡಿಸಿದ ಕಾಮಗಾರಿಗಳನ್ನು ಅದೇ ವರ್ಷ ಪೂರ್ಣಗೊಳಿಸಿ, ಸಂಪೂರ್ಣ ಮೊತ್ತವನ್ನು ಪಾವತಿಸಬೇಕು. ಮುಂದಿನ ವರ್ಷಕ್ಕೆ ಬಾಕಿ ಇಡಬಾರದು ಎಂದು ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

    65 ಲಕ್ಷ ರೂ. ಲ್ಯಾಪ್ಸ್: ಜಿಲ್ಲಾ ಪಂಚಾಯಿತಿಯಲ್ಲಿ 2019-20ರ ಸಾಲಿನಲ್ಲಿ ಕಟ್ಟಡ ಕಾಮಗಾರಿಗೆ ಮೀಸಲಿಟ್ಟಿದ್ದ 65 ಲಕ್ಷ ರೂ. ಅನುದಾನವನ್ನು ಸಂಬಂಧಪಟ್ಟ ಕಾಮಗಾರಿ ನಿರ್ವಹಿಸುವ ಇಲಾಖೆಗೆ ಬಿಡುಗಡೆಗೊಳಿಸದೆ ಅನುದಾನ ಲ್ಯಾಪ್ಸ್ ಮಾಡಲಾಗಿದೆ. ಸಾಕಷ್ಟು ಮುಂಚಿತವಾಗಿ ಅನುದಾನ ಬಿಡುಗಡೆಯಾಗಿದ್ದರೂ, ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ. ಇದಕ್ಕೆ ಕಾರಣರಾದವರ ವಿರುದ್ಧ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

    900 ಟನ್ ರಸಗೊಬ್ಬರ ದಾಸ್ತಾನು: ಜಿಲ್ಲೆಯಲ್ಲಿ 1965 ಮಿ.ಮೀ ಮಳೆ ಆಗಿದ್ದು, ವಾಡಿಕೆ ಮಳೆಯ ಶೇ.95.6 ಆಗಿದೆ. 2564 ಕ್ವಿಂಟಾಲ್ ಬಿತ್ತನೆ ಬೀಜ ಹಾಗೂ 1077 ಟನ್ ರಸಗೊಬ್ಬರ ವಿತರಿಸಲಾಗಿದೆ. ಇನ್ನೂ 900 ಟನ್‌ರಸಗೊಬ್ಬರ ದಾಸ್ತಾನು ಇದೆ. ಕೊರತೆ ಇಲ್ಲ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯಕ್ ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಕಟ್ಟುನಿಟ್ಟಾಗಿ ಜಾರಿಯಾಗುತ್ತಿಲ್ಲ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ನೀಡುವ ವಿವಿಧ ಪರಿಕರಗಳನ್ನು ಶೀಘ್ರದಲ್ಲಿ ವಿತರಿಸುವಂತೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ತಿಳಿಸಿದರು.
    ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts