ಶಿವಮೊಗ್ಗ: ನನ್ನ ಇಲಾಖೆಗೆ ಅಗತ್ಯವಿರುವ ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇನೆ. ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆ ತರುವ ಪ್ರಯತ್ನ ನಡೆದಿದೆ. ಹಲವು ಕಲಿಕಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ನನ್ನ ಇಲಾಖೆ ಜತೆಗೆ ಜಿಲ್ಲೆಯ ಅಭಿವೃದ್ಧಿಗೂ ಪ್ರಯತ್ನ ಮುಂದುವರಿದಿದೆ ಎಂದು ತಿಳಿಸಿದರು.
ಜಿಲ್ಲೆಯ ನೀರಾವರಿ ಮತ್ತು ಆಡಳಿತಾತ್ಮಕ ಸುಧಾರಣೆ ಬಗ್ಗೆ ಚರ್ಚಿಸಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯನ್ನು ಬೋಧನಾ ಆಸ್ಪತ್ರೆಯಿಂದ ಬೇರ್ಪಡಿಸಿ ಹೊಸ ರೀತಿಯಲ್ಲಿ ರೂಪಿಸುವ ಅಗತ್ಯವಿದೆ. ಈ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚಿಸಿದ್ದೇನೆ. ಇದಕ್ಕೆ ಹೆಚ್ಚಿನ ಹಣದ ಅವಶ್ಯಕತೆಯಿದೆ ಎಂದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿಐಎಸ್‌ಎಲ್ ಪುನಶ್ಚೇತನ ಮಾಡುತ್ತೇನೆ ಎಂದು ಘೋಷಿಸಿದ್ದರು. ಎರಡು ಬಾರಿ ಸಿಎಂ ಆಗಿದ್ದ ಅವರಿಗೆ ಸಮಸ್ಯೆ ಬಗ್ಗೆ ಅರಿವಿದೆ. ಈಗ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎನ್ನುವುದು ಸರಿಯಲ್ಲ. ರಾಜ್ಯ ಸರ್ಕಾರ ಈಗಾಗಲೇ ವಿಐಎಸ್‌ಎಲ್‌ಗೆ ಗಣಿ ಮಂಜೂರು ಮಾಡಿದೆ. ಕೊಟ್ಟ ಮಾತಿನಂತೆ ಅವರು ಕಾರ್ಖಾನೆ ಅಭಿವೃದ್ಧಿ ಮಾಡಲಿ ಎಂದು ತಿಳಿಸಿದರು.