More

    ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವೆ

    ಬೇಲೂರು: ಬಸವಣ್ಣ ಹೇಳಿದಂತೆ ಕಾಯಕವೇ ಕೈಲಾಸ ಎಂಬಂತೆ ಬೇಲೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕೆಲಸ ಮಾಡಿಸಲು ಮುಂದಾಗುತ್ತೇನೆ ಎಂದು ಶಾಸಕ ಎಚ್.ಕೆ.ಸುರೇಶ್ ಭರವಸೆ ನೀಡಿದರು.

    ತಾಲೂಕಿನ ಹಗರೆ ಗ್ರಾಮ ಪಂಚಾಯಿತಿ ಕಚೇರಿ ಆವರಣ ವೀರಶೈವ ಕಲ್ಯಾಣ ಮಂಟಪ, ಜಲಜೀವನ್ ಮಿಷನ್ ಯೋಜನೆ ಸೇರಿದಂತೆ ಹಗರೆ, ಸವಾಸಿಹಳ್ಳಿ, ಇಬ್ಬೀಡು, ಆಂದಲೆ, ಯಲಹಂಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ಮತ್ತು ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.

    ರಾಜಕಾರಣವನ್ನು ಚುನಾವಣೆ ಸಂದರ್ಭ ಮಾತ್ರ ಮಾಡಬೇಕು. ಆದರೆ ಕ್ಷೇತ್ರದ ಅಭಿವೃದ್ಧಿ ಕೆಲಸವನ್ನು ಪಕ್ಷಭೇದ ಮರೆತು ಕ್ಷೇತ್ರದ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ. ಜತೆಗೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದರೆ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಬಹುದು ಎಂಬುದು ನನ್ನ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಹಗರೆ ಸೇರಿದಂತೆ ಈ ಭಾಗದ ಮದ್ಯಮ ವರ್ಗದವರ ಅನುಕೂಲಕ್ಕಾಗಿ ಇಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಅಂಗನವಾಡಿಗಳಲ್ಲಿ ಮಕ್ಕಳು ಶುದ್ಧ ಕುಡಿಯುವ ನೀರು ಕುಡಿಯಬೇಕೆಂಬ ಉದ್ದೇಶದಿಂದ ವಾಟರ್ ಫಿಲ್ಟರ್‌ಗಳನ್ನು ವಿತರಿಸಲಾಗಿದೆ ಎಂದರು.

    ತಾಲೂಕಿನ ಜನರಿಗೆ ಶುದ್ಧ ಕುಡಿಯುವ ನೀರು ಕೊಡುವುದಕ್ಕಾಗಿ ಸ್ಥಳೀಯವಾಗಿ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗಬೇಕೆಂಬ ನಿಟ್ಟಿನಲ್ಲಿ ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಅದು ನಮ್ಮದೇ ಎಂದು ತಿಳಿದುಕೊಂಡು ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರ ವಿಶ್ವಾಸ ಪಡೆದು ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಸುತ್ತಿದ್ದೇನೆ. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗೂ ಅವಕಾಶ ಕೊಡದೆ ಎಚ್ಚರ ವಹಿಸಿ ಕೆಲಸ ಮಾಡಲಾಗುವುದು ಎಂದರು.

    ಇಲಾಖೆಗಳಿಗೆ ಬರುವಂತಹ ಅನುದಾನ ಮತ್ತು ಸವಲತ್ತುಗಳ ಸಂಪೂರ್ಣ ವಿವರವನ್ನು ನನ್ನ ಗಮನಕ್ಕೆ ತಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳೇ ನಿಮಗೆ ಬೇಕಾದ ಹಾಗೆ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ವಿತರಿಸುವ ಕೆಲಸ ಮಾಡಬಾರದು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತರುವುದಕ್ಕೆ ಶ್ರಮ ವಹಿಸಿ ಕ್ಷೇತ್ರದ ಹಾಗೂ ಈ ಭಾಗದ ಅಭಿವೃದ್ಧಿಗೆ ನಿಮ್ಮೆಲ್ಲರ ಸಹಕಾರದೊಂದಿಗೆ ಕೆಲಸ ಮಾಡಲಾಗುವುದು ಎಂದರು.

    ಹಗರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿಶಾಂತ್‌ಕುಮಾರ್ ಮಾತನಾಡಿ, ಎಚ್.ಕೆ.ಸುರೇಶ್ ಅವರು ಶಾಸಕರಾದ ಅಲ್ಪ ಅವದಿಯಲ್ಲೇ ಉತ್ತಮ ಕೆಲಸಗಳನ್ನು ಮಡುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿಸುತಿದ್ದಾರೆ. ಅಲ್ಲದೆ ನಮ್ಮ ಮಾದಿಹಳ್ಳಿ ಹೋಬಳಿ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಶಾಸಕರು ಹೆಚ್ಚಿನ ಶ್ರಮ ವಹಿಸಿ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸುವುದಕ್ಕೆ ಕ್ರಮ ವಹಿಸಿರುವುದು ಶ್ಲಾಘನೀಯ ಎಂದರು.

    ಹಗರೆ ಗ್ರಾಪಂ ಅಧ್ಯಕ್ಷೆ ಜಯಮ್ಮ, ಇಬ್ಬೀಡು ಗ್ರಾಪಂ ಅಧ್ಯಕ್ಷೆ ಮಂಜುಳಾ ಮಂಜುನಾಥ್, ಆಂದಲೆ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಯಲಹಂಕ ಗ್ರಾಪಂ ಅಧ್ಯಕ್ಷೆ ಆಶಾ, ಸದಸ್ಯರಾದ ಶೇಖರೇಗೌಡ, ಮಂಜುನಾಥ, ರಾಜಯ್ಯ, ಪುಟ್ಟಣ್ಣ, ತಾಪಂ ಇಒ ಸತೀಶ್, ಬೇಲೂರು-ಹಳೇಬೀಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಸವರಾಜು, ಬಿಜೆಪಿ ತಾಲೂಕು ಅಧ್ಯಕ್ಷ ಅಡಗೂರು ಆನಂದ್, ಮುಖಂಡ ಛಲವಾದಿ ಪಟ್ಟರಾಜು ಮತ್ತು ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts