More

    ಶ್ರೀ ಚನ್ನಕೇಶವಸ್ವಾಮಿ ದರ್ಶನ ಪಡೆದ ಸಂಸದ ಪ್ರಜ್ವಲ್

    ಬೇಲೂರು: ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಭಾನುವಾರ ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇಗುಲಕ್ಕೆ ಕಾರ್ಯಕರ್ತರೊಂದಿಗೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ನಂತರ ಜೆಡಿಎಸ್ ಪಕ್ಷದ ಹಿರಿಯ ಮುಖಂಡರ ಮನೆಗಳಿಗೆ ಭೇಟಿ ನೀಡಿ ಚುನಾವಣೆ ಬಗ್ಗೆ ಚರ್ಚಿಸಿ ಬೆಂಬಲ ಕೋರಿದರು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಡಿಕೆಯಂತೆ ಚುನಾವಣೆಗೂ ಮುನ್ನ ಶ್ರೀ ಚನ್ನಕೇಶವಸ್ವಾಮಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ನಂತರ ಚುನಾವಣಾ ಪ್ರಚಾರಕ್ಕೆ ಮುಂದಾಗುತ್ತೇವೆ. ಅದೇ ರೀತಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಪ್ರಚಾರಕ್ಕೆ ಮುಂದಾಗಿದ್ದೇವೆ. ಪಟ್ಟಣದಲ್ಲಿರುವ ಎಲ್ಲ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ನನಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

    ಈಗಾಗಲೇ ಬಹುತೇಕ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನನಗೆ ಕರೆ ಮಾಡಿ ಸಹಕಾರ ನೀಡುತ್ತಿದ್ದಾರೆ. ನಮ್ಮ ಮುಖ್ಯ ಗುರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೈ ಬಲ ಪಡಿಸುವುದು ಹಾಗೂ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಮೋದಿ ಅವರ 400 ಸ್ಥಾನಗಳಲ್ಲಿ ನಾನೂ ಒಬ್ಬನಾಗಿ ಅವರೊಂದಿಗೆ ದೇಶ ಸೇವೆ ಸಲ್ಲಿಸಬೇಕೆಂದು ಪಣತೊಟ್ಟು ಇಂದಿನಿಂದ ಕೆಲಸ ಮಾಡಲು ಮುಂದಾಗಿದ್ದೇನೆ ಎಂದರು.

    ಜಿಲ್ಲೆಯಲ್ಲಿ ಯಾವುದೇ ಭಿನ್ನಮತ ಇಲ್ಲ. ಸಣ್ಣಪುಟ್ಟ ಗೊಂದಲಗಳಿದೆ ಅದನ್ನು ಸರಿಪಡಿಸುವ ಕೆಲಸವನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡಲಿದ್ದಾರೆ. ಜಿಲ್ಲೆಯ ಮೂರು ಭಾಗಗಳಲ್ಲಿ ಚುನಾವಣಾ ಪ್ರಚಾರ ಕೇಂದ್ರಗಳನ್ನು ತೆರೆದಿದ್ದು ಅದರಲ್ಲಿ ಪಕ್ಷದ ವಿಚಾರವಾಗಿ ಚರ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಶನಿವಾರ ಕಡೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಅಲ್ಲಿನ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅವರು ಅಪಾರ ಬೆಂಬಲಿಗರೊಂದಿಗೆ ನಮಗೆ ಬೆಂಬಲ ನೀಡಿದ್ದಾರೆ ಎಂದರು.

    ಜಿಲ್ಲೆಯಲ್ಲಿ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಿ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡುತ್ತೇವೆ. ಯಾವುದೇ ತಪ್ಪು ಮಾಡಿದ್ದರೂ ಕ್ಷಮಿಸಿ, ಜಿಲ್ಲೆಯ ಅಭಿವೃದ್ಧಿಗಾಗಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

    ತಾಲೂಕು ಜೆಡಿಎಸ್ ಅಧ್ಯಕ್ಷ ತೋಚ ಅನಂತಸುಬ್ಬಾರಾಯ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೆಗೌಡ, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಪುರಸಭೆ ಸದಸ್ಯ ಶ್ರೀನಿವಾಸ್, ಮುಖಂಡರಾದ ನಟರಾಜ್, ನಾಗೇಶ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts