ಜಾರಕಿಹೊಳಿ ಜತೆ ಕೈ ಶಾಸಕರು ಶೀಘ್ರ ಬಿಜೆಪಿಗೆ- ಸಂಸದ ಸುರೇಶ ಅಂಗಡಿ

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸಂಸದ ಸುರೇಶ ಅಂಗಡಿ ತಿಳಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ,ದೇಶದ ಎಲ್ಲ ಕಡೆಗೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ. ಕೆಲವರು ರಾಜಕೀಯ ನೆಲೆಗಾಗಿ ಕಾಂಗ್ರೆಸ್ ತೊರೆಯಲು ಸಜ್ಜಾಗಿದ್ದಾರೆ. ಅಂಥವರೆಲ್ಲ ಯಾವುದೇ ಸಂದರ್ಭದಲ್ಲೂ ಬಿಜೆಪಿ ಸೇರಬಹುದು, ಮುಂದಿನ ಬೆಳವಣಿಗೆಗಳು ಕುತೂಹಲಕಾರಿಯಾಗಿವೆ ಎಂದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಕಾಂಗ್ರೆಸ್‌ನಲ್ಲಿ ನಿಷ್ಠಾವಂತ ಕಾರ್ಯಕರ್ತ. ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗಾಗಿ ಹಗಲಿರುಳು ಶ್ರಮಿಸಿದ ವ್ಯಕ್ತಿ. ಅಂತಹ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನನ್ನು ನಿರ್ಲಕ್ಷೃ ಮಾಡಿದ್ದಾರೆ. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹಾಗಾಗಿ ಅವರು ಬಿಜೆಪಿ ಸೇರುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಅನುಮತಿ ಮೇರೆಗೆ ಪಕ್ಷಕ್ಕೆ ಬರುತ್ತಿದ್ದಾರೆ ಎಂದರು.

ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗದೆ ನಶಿಸಿ ಹೋಗುತ್ತಿದೆ. ಮುಂಬರುವ ದಿನಗಳಲ್ಲಿ ಸಂಪೂರ್ಣ ನೆಲೆ ಕಳೆದುಕೊಳ್ಳಲಿದೆ ಎಂದು ಹೇಳಿದ ಅಂಗಡಿ, ಉತ್ತರ ಪ್ರದೇಶ ಅಮೇಥಿಯಲ್ಲಿ ಸೋಲುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ಗಾಂಧಿ ಕೇರಳದ ವೈನಾಡು ಕ್ಷೇತ್ರದಿಂದ ಕಣಕ್ಕಿಳಿದರು ಎಂದು ವ್ಯಂಗ್ಯವಾಡಿದರು.

ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವುದು ಬಿಡುವುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನೀಡಿದರೆ ನಿಭಾಯಿಸುವ ಶಕ್ತಿ ಇದೆ. ಹಾಗಂತ ಸಚಿವ ಸ್ಥಾನ ನೀಡುವಂತೆ ನಾಯಕರ ಮೇಲೆ ಒತ್ತಡ ಹಾಕುವುದಿಲ್ಲ ಎಂದು ಅಂಗಡಿ ಹೇಳಿದರು.

ರಮೇಶ ಜಾರಕಿಹೊಳಿ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಲೀಡ್ ಕೊಟ್ಟಿದ್ದಾರೆ. ಆದ್ದರಿಂದ ಅವರಿಗೆ ಅಭಿನಂದನೆ ಸಲ್ಲಿಸುವೆ.
|ಸುರೇಶ ಅಂಗಡಿ, ಸಂಸದರು.

Leave a Reply

Your email address will not be published. Required fields are marked *