ಮುಸ್ಲಿಂ ಅಭ್ಯರ್ಥಿಗೆ ಕೈ ಎಂಪಿ ಟಿಕೆಟ್

<ಸೆಂಟ್ರಲ್ ಕಮಿಟಿ ಸ್ವರ್ಣ ಮಹೋತ್ಸವದಲ್ಲಿ ಒತ್ತಾಯ>

ವಿಜಯವಾಣಿ ಸುದ್ದಿಜಾಲ ಮಂಗಳೂರು
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಒತ್ತಾಯಿಸಿದ್ದಾರೆ.

ಪುರಭವನದಲ್ಲಿ ಶನಿವಾರ ಅವಿಭಜಿತ ದ.ಕ ಜಿಲ್ಲೆಯ ‘ದಿ ಮುಸ್ಲಿಂ ಸೆಂಟ್ರಲ್ ಕಮಿಟಿ’ಯ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದು ಭಿಕ್ಷೆಯಲ್ಲ. ಮುಸ್ಲಿಮರ ಹಕ್ಕು. ಅದಕ್ಕಾಗಿಯೇ ಈಗಾಗಲೆ ಪಾರ್ಲಿಮೆಂಟರಿ ಆ್ಯಕ್ಷನ್ ಸಮಿತಿ ರಚಿಸಲಾಗಿದೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಸಿಗದಿದ್ದರೆ ಸಮಿತಿ ನಿರ್ಣಯದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದವರು ಪಕ್ಷಕ್ಕೆ ಎಚ್ಚರಿಕೆ ಸಂದೇಶ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ‘ಸ್ವರ್ಣ ಮಹೋತ್ಸವ ಸಂಭ್ರಮ’ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ, ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ತನ್ನ ಸ್ವರ್ಣ ಮಹೋತ್ಸವದ ಸವಿನೆನಪಿಗೆ ಮುಸ್ಲಿಂ ಸಮುದಾಯಭವನ ನಿರ್ಮಾಣಕ್ಕೆ ಮುಂದಾದರೆ ಸಂಪೂರ್ಣ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿ, ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸುವ ಅಗತ್ಯವಿಲ್ಲ. ಅದು ಅವರ ರಕ್ತಗತವಾಗಿದೆ. ಮತೀಯ ಅಲ್ಪಸಂಖ್ಯಾತರ ಬಗ್ಗೆ ಪೊಲೀಸ್ ಇಲಾಖೆ ಹೊಂದಿರುವ ಮಲತಾಯಿ ಧೋರಣೆ ಕೈಬಿಡಬೇಕು ಎಂದರು.

ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೋಬೊ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಂ.ಎ.ಗಫೂರ್, ರಾಜ್ಯ ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಕಾರ್ಪೊರೇಟರ್ ಅಬ್ದುಲ್ ಲತೀಫ್ ಕಂದಕ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಪಿಎಫ್‌ಐ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅಬ್ದುರ‌್ರವೂಫ್ ಪುತ್ತಿಗೆ, ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್ ಮುಂತಾದವರು ಅತಿಥಿಗಳಾಗಿದ್ದರು.

ಕಾರ್ಯಕ್ರಮ ಸಂಚಾಲಕ ಇಬ್ರಾಹೀಂ ಕೋಡಿಜಾಲ್ ಸ್ವಾಗತಿಸಿದರು. ಕಮಿಟಿ ಪ್ರಧಾನ ಕಾರ್ಯದರ್ಶಿ ಹನೀಫ್ ಬಂದರ್ ವಂದಿಸಿದರು. ಬ್ಯಾರಿ ಅಕಾಡೆಮಿ ಸದಸ್ಯ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ 50 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.

ಸಿದ್ದರಾಮಯ್ಯ ವಿರುದ್ಧ ಆಕ್ರೋಶ: ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಹಾಜರಾಗಿರುವ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್.ಮುಹಮ್ಮದ್ ಮಸೂದ್ ವೇದಿಕೆಯಲ್ಲಿ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದರು. ಅಂದು ಮೈಸೂರಿನಲ್ಲಿ ಉಪಚುನಾವಣೆ ಸಂದರ್ಭ ನಾವು ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಇಲ್ಲಿಂದ ತೆರಳಿ ಪ್ರಚಾರ ಕಾರ‌್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೆವು. ಆಗ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಪುರುಸೊತ್ತು ಇತ್ತು. ಈಗ ಮಾತ್ರ ಅವರಿಗೆ ಸಮಯ ಇಲ್ಲ. ಅವರು ಇಲ್ಲಿಗೆ ಬಾರದಂತೆ ಒಂದು ಗುಂಪಿನ ಜನರ ಹುನ್ನಾರ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.