

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪು ಹಾಗೂ ವಿಶೇಷ ನ್ಯಾಯಾಲಯದ ಆದೇಶವನ್ನು ಒಪ್ಪಿಕೊಂಡು ಗೌರವಿಸಿ ಗೌರವಯುತವಾಗಿ MUDA Case ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ. ಯಾವುದೇ ತನಿಖೆಗೆ ಸಿದ್ಧ ಎಂದು ಸಿಎಂ ಹೇಳಿದ್ದಾರೆ. ಈಗ ಸಿದ್ದರಾಮಯ್ಯ ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.
ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮೈಸೂರು ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸಬೇಕೆಂದು ಆದೇಶ ನೀಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಎಸ್ಗೆ ಆದೇಶಿಸಿದೆ. ತಕ್ಷಣ ಎಫ್‍ಐಆರ್ ದಾಖಲಿಸಿ ತನಿಖೆ ಮಾಡಬೇಕು. ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ನ್ಯಾಯಯುತ ತನಿಖೆ ಅಸಾಧ್ಯ. ಹೀಗಾಗಿ ಸಿಬಿಐನಿಂದಲೇ ತನಿಖೆ ಆಗಬೇಕು. ಸಿಬಿಐ ತನಿಖೆಗೆ ಆದೇಶ ಮಾಡಿದರೆ ಗೌರವ ಮತ್ತಷ್ಟು ಹೆಚ್ಚಾಗುತ್ತೆ ಎಂದಿದ್ದಾರೆ.
ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯದ ಸಿಎಂ ಇಂದು ಬೆತ್ತಲಾಗಿದ್ದಾರೆ. ಬಿಜೆಪಿ ಭ್ರಷ್ಟರ ಪಕ್ಷ, ನಾವು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇ ಅಂತಾ ಹೇಳಿ ಅಧಿಕಾರಕ್ಕೆ ಬಂದರು. ವಾಲ್ಮೀಕಿ ನಿಗಮದ ತನಿಖೆ ತಾರ್ಕಿಕ ಅಂತ್ಯಕ್ಕೆ ಹೋದರೆ ಹೈ ಕಮಾಂಡ್ ಬುಡಕ್ಕೆ ಬರುತ್ತದೆ ಅಂತಾ ಕಾಂಗ್ರೆಸ್ ಹೈಕಮಾಂಡ್ಗೆ ಗೊತ್ತಿದೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ಭ್ರಷ್ಟ ಸಿಎಂ ಬೆನ್ನಿಗೆ ನಿಲ್ಲುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ವೇದಿಕೆಗೆ ಹತ್ತಿಸಬಾರದು ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಆಗಬೇಕು ಅಂತಾ ಇದ್ದಾರೆ. ಪಾಪಾ ಅವರ ಬಗ್ಗೆ ಯಾಕೆ ಮಾತನಾಡುವುದು? ಸದ್ಯ ನಾಳೆ ಒಂದು ದಿನ ಪ್ರತಿಭಟನೆಗೆ ನಿರ್ಧರಿಸಿದ್ದೇವೆ, ನಾಳೆ ಸಂಜೆಯೇ ಸಿಎಂ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎಂದಿದ್ದಾರೆ.
ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕೆಂದರೆ ಅದು ಸಿಬಿಐನಿಂದ ಮಾತ್ರ ಸಾಧ್ಯ ಎಂದು ಅವರು ವಿಶ್ಲೇಷಿಸಿದರು.
ಸ್ನೇಹಮಯಿ ಕೃಷ್ಣ ಅವರು ಈ ಆದೇಶದ ಪ್ರತಿಯನ್ನು ನೀಡಿದ ತಕ್ಷಣ ಲೋಕಾಯುಕ್ತ ಪೊಲೀಸರು ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಬೇಕಾಗಿದೆ. ಅಲ್ಲದೆ 3 ತಿಂಗಳಿನಲ್ಲಿ ವರದಿ ಕೊಡಲು ತಿಳಿಸಿದೆ ಎಂದು ವಿವರಿಸಿದರು. ವಿಶೇಷ ನ್ಯಾಯಾಲಯದ ತೀರ್ಪು ನನ್ನ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿಗಳೂ ಹೇಳಿದ್ದಾರೆ. ನಾನು ಯಾವುದೇ ತನಿಖೆಗೆ ಹೆದರುವುದಿಲ್ಲ; ತನಿಖೆ ಎದುರಿಸಲು ಸಿದ್ಧನಿದ್ದೇನೆ. ರಾಜೀನಾಮೆ ಕೊಡುವುದಿಲ್ಲ ಎಂದಿದ್ದಾರೆ ಎಂದು ಹೇಳಿದರು.