

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ರಾಜಕೀಯ ತೀರ್ಪು ಎಂದು ಹೇಳಿದ್ದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.
ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಎಂದು ವ್ಯಾಖ್ಯಾನಿಸಿದ್ದಾರೆ. ಇದರಿಂದ ಸಚಿವ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ಪತ್ರ ಬರೆದಿದ್ದಾರೆ.
ಜಮೀರ್ ಅಹ್ಮದ್ ವಿರುದ್ಧ ಕ್ರಿಮನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನ್ಯಾಯಾಂಗ ನಿಂದನೆ ಕಾಯ್ದೆ-1971ರ ಕಲಂ 15 (1) (ಬಿ) ಅಡಿ ಒಪ್ಪಿಗೆ ನೀಡಬೇಕು ಎಂದು ಅಬ್ರಹಾಂ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ ಶೆಟ್ಟಿ ಅವರಿಗೆ ಕೋರಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು.
ಈ ಆದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್ ಜಡ್ಜ್‌ಮೆಂಟ್. ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದಿದ್ದರು.