More

    ಮೈಷುಗರ್ ಉಳಿಸಲು ಮಾಜಿ ಸಿಎಂಗೆ ಮನವಿ

    ಮಂಡ್ಯ: ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ನಿಯೋಗ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
    ಬೆಂಗಳೂರಿನ ಅವರ ನಿವಾಸದಲ್ಲಿ ಬುಧವಾರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ನೇತೃತ್ವದ ಭೇಟಿ ಮಾಡಿದ ರೈತ ಮುಖಂಡರು, ಸರ್ಕಾರ ಮೈಷುಗರ್ ಕಾರ್ಖಾನೆಯನ್ನು ಹೊರಗುತ್ತಿಗೆಗೆ ನೀಡಲು ನಿರ್ಧರಿಸಿದೆ. ಇದು ಕಾರ್ಯಗತವಾದರೆ ಜಿಲ್ಲೆಯ ಅಭಿವೃದ್ಧಿ ಹಾಗೂ ಆರ್ಥಿಕಗೆ ದೊಡ್ಡ ಹೊಡೆತ ಬೀಳಲಿದೆ. ಜತೆಗೆ ಭವಿಷ್ಯದಲ್ಲಿ ರೈತರಿಗೆ ತೊಂದರೆ ಅನುಭವಿಸಲಿದ್ದಾರೆ. ಆದ್ದರಿಂದ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.
    ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ, ಸ್ಥಳದಲ್ಲಿಯೇ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಮೊಬೈಲ್ ಕರೆ ಮಾಡಿದರು. ಯಾವುದೇ ಕಾರಣಕ್ಕೂ ಮೈಷುಗರ್ ಕಾರ್ಖಾನೆಯನ್ನು ಗುತ್ತಿಗೆ ನೀಡಬಾರದು. ಸಚಿವ ಸಂಪುಟದಲ್ಲಿ ಕೈಗೊಂಡಿರುವ ನಿರ್ಧಾರವನ್ನು ವಾಪಾಸ್ ಪಡೆಯಬೇಕು. ಮುಂದಿನ ತಿಂಗಳ ಅಧಿವೇಶನ ನಡೆಯಲಿದ್ದು, ಅಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲಿಯವರೆಗೂ ಟೆಂಡರ್ ಸೇರಿದಂತೆ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ಹೇಳಿದರು.
    ಇದಕ್ಕೆ ಪ್ರತಿಕ್ರಿಯಿಸಿರುವ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ನಿರ್ಧಾರವನ್ನು ವಾಪಾಸ್ ಪಡೆದುಕೊಳ್ಳುವುದು ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಆಗ ಸಿದ್ದರಾಮಯ್ಯ ಅವರು, ಕಾರ್ಖಾನೆಯನ್ನು ಹೊರಗುತ್ತಿಗೆ ನೀಡದಂತೆ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದೆಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ರೈತನಾಯಕಿ ಸುನಂದ ಜಯರಾಂ ತಿಳಿಸಿದರು.
    ನಿಯೋಗದಲ್ಲಿ ರೈತ ಮುಖಂಡರಾದ ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಎಂ.ಬಿ.ಶ್ರೀನಿವಾಸ್, ಕೃಷ್ಣಪ್ರಕಾಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts