More

    ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವ ಎಚ್ಚರಿಕೆ ನೀಡಿದ ಮೈಸೂರು ಜಿಲ್ಲಾಧಿಕಾರಿ

    ಮೈಸೂರು: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಪ್ರಾರಂಭವಾಗಿದ್ದು, ಯಾವುದೇ ಸಂದರ್ಭದಲ್ಲಿ ಜನ ಹಾಗೂ ಜಾನುವಾರುಗಳು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದರೆ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಹಂತದ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಕರ್ತವ್ಯಲೋಪ ವೆಸಗುವ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾನ್ಸೂನ್ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಅವರ ತವರು ಜಿಲ್ಲೆಯಲ್ಲಿ ನಾವುಗಳು ಕಾರ್ಯನಿರ್ವಹಿಸುತ್ತಿದ್ದು, ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಈ ಹಿಂದೆ ತೊಂದರೆಗೊ ಳಗಾಗಿದ್ದ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಜನರ ಸ್ಥಳಾಂತರಕ್ಕೆ ಸಿದ್ಧರಾಗಿರಬೇಕು ಎಂದು ನಿರ್ದೇಶನ ನೀಡಿದರು.

    ಅಪಾಯಕಾರಿ ಮರಗಳನ್ನು, ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವುಗೊಳಿಸಬೇಕು. ರಸ್ತೆಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳ ಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳು, ಶಾಲಾ ಕಟ್ಟಡಗಳಿಂದ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ತಾಲೂಕು ಹಂತದಲ್ಲಿ ಕಂಟ್ರೋಲ್ ರೂಂ ತೆರೆದು 24 ಗಿ 7 ಕಾರ್ಯ ನಿರ್ವಹಿಸಬೇಕು. ಯಾವುದೇ ಜೀವಹಾನಿ ಪ್ರಕರಣಗಳಿಗೆ 48 ಗಂಟೆಯೊಳಗೆ ಪರಿಹಾರ ಪಾವತಿಸಲು ವಿಳಂಬವಾಗಬಾರದು. ಈಗಾಗಲೇ ತಾಲೂಕು ಮಟ್ಟದಲ್ಲಿರುವ ವಿಪತ್ತು ನಿರ್ವಹಣಾ ತಂಡಗಳನ್ನು ಸಕ್ರಿಯಗೊಳಿಸಬೇಕು ಎಂದು ಸೂಚಿಸಿದರು.

    ಕೆರೆ ದಂಡೆಗಳನ್ನು ಪರೀಕ್ಷಿಸಬೇಕು. ಎಲ್ಲಾದರು ಸೋರಿಕೆ ಕಂಡುಬಂದರೆ ತಕ್ಷಣ ಸರಿಪಡಿಸಬೇಕು. ಕೆರೆಗಳ ಅಕ್ಕಪಕ್ಕದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಲು ತಮ್ಮಲ್ಲಿ ಸಾಕಷ್ಟು ಹಣ ಇದ್ದು, ಜಂಟಿ ಸರ್ವೇ ವರದಿ ಪಡೆದು ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದರು.

    ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಅಗತ್ಯ ಬೋಟ್‌ಗಳು, ಮುಳುಗು ತಜ್ಞರು ಹಾಗೂ ಅಗತ್ಯ ಪರಿಕರಗಳೊಂದಿಗೆ ಪರಿಸ್ಥಿತಿ ನಿಭಾಯಿಸಲು ಸಿದ್ಧರಿರಬೇಕು ಹಾಗೂ ಸಿಡಿಲು ಸಂಭವಿಸಿದಾಗ ರಕ್ಷಿಸಿಕೊಳ್ಳಲು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

    ನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ನಗರದ 65 ವಾರ್ಡ್‌ಗಳ ಪೈಕಿ 6 ವಾರ್ಡ್‌ಗಳ ಕೆಲವು ಕಡೆಗಳಲ್ಲಿ ಮಳೆಯಿಂದ ಸಮಸ್ಯೆ ಕಂಡು ಬಂದಿತ್ತು. ಇದೀಗ ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಉಪವಿಭಾಗಾಧಿಕಾರಿ ಕಮಲಾಬಾಯಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts