ಗುತ್ತಿಗೆದಾರರಿಗೆ ಬಾಕಿ ಪಾವತಿಸಲು ಕ್ರಮ

ಮೈಸೂರು: ಗುತ್ತಿಗೆದಾರರಿಗೆ ಬಾಕಿ ಪಾವತಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ 10 ಕೋಟಿ ರೂ. ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರಪಾಲಿಕೆ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಗುತ್ತಿಗೆದಾರರೊಂದಿಗಿನ ಸಭೆಯಲ್ಲಿ ಮಾತನಾಡಿದರು. ದಸರಾ ಹಾಗೂ ವಿವಿಧ ಕಾಮಗಾರಿಗಳಲ್ಲಿ ಕೈಗೊಂಡ ಕೆಲಸಗಳ ಹಣ ಬಾಕಿ ಇದೆ. ಈ ಬಗ್ಗೆ ಗುತ್ತಿಗೆದಾರರು ಹಲವು ಬಾರಿ ಮನವಿ ಮಾಡಿದ್ದು, ಶೀಘ್ರದಲ್ಲಿಯೇ ಅವರ ಬಿಲ್ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು.

ಈ ಬಾರಿಯ ದಸರಾ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಿ ಯಾವುದೇ ತೊಂದರೆಯಾಗದಂತೆ ಪೂರ್ಣಗೊಳಿಸಿ ದಸರಾ ಆಚರಿಸಲು ಸಹಕರಿಸಬೇಕು. ನಗರಕ್ಕೆ ಮೂಲಸೌಕರ್ಯ ನೀಡುವುದರಲ್ಲಿ ಗುತ್ತಿಗೆದಾರರ ಪಾತ್ರ ಮುಖ್ಯವಾಗಿದೆ. ಮೈಸೂರು ನಗರ ಸ್ವಚ್ಛತೆಯಿಂದ ಇರಲು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವೆ ಸಮನ್ವಯತೆ ಇರಬೇಕು ಎಂದರು.

ಹೊರ ವರ್ತುಲ ರಸ್ತೆಯ ಎರಡೂ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ರಸ್ತೆ ಬದಿ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸಬೇಕು. ದಸರಾ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಮೈಸೂರಿನ ಸ್ವಚ್ಛತೆ ಆಕರ್ಷಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಮಾಡಿದ ಗುತ್ತಿಗೆ ಕಾಮಗಾರಿಗಳ ಹಣ ಪಾವತಿ ಹಲವು ವರ್ಷಗಳಿಂದ ಬಾಕಿ ಉಳಿದಿದೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಕೇಳಿದರೂ ಸ್ಪಂದಿಸುತ್ತಿಲ್ಲ. ಇದರಿಂದ ಗುತ್ತಿಗೆದಾರರು ಸಾಲ ಮಾಡಿಕೊಂಡು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ , ಮಾರ್ಚ್ ಅಂತ್ಯದೊಳಗೆ ಗುತ್ತಿಗೆದಾರರ ಎಲ್ಲ ಹಣ ಬಿಡುಗಡೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಮೇಯರ್ ಪುಷ್ಪಲತಾ ಜಗನ್ನಾಥ್, ಶಾಸಕರಾದ ಎಸ್.ಎ ರಾಮದಾಸ್, ಎಲ್.ನಾಗೇಂದ್ರ, ಉಪ ಮೇಯರ್ ಸಫೀ ಅಹಮ್ಮದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಜ್ಯೋತಿ, ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎಸ್. ಕಾಂತರಾಜು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *