ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಮಂಗಳವಾರ ಕುವೆಂಪು ನಗರದಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಬೇಕೆಂದು ಹೈಕೋರ್ಟ್ ಆದೇಶ ಹೊರಡಿಸಿದರೂ ರಾಜ್ಯ ಸರ್ಕಾರ ಆದೇಶ ಜಾರಿಗೆ ಆಸಕ್ತಿ ತೋರುತ್ತಿಲ್ಲ. ಕಾರ್ಮಿಕರ ದುಡಿಮೆಗೆ ತಕ್ಕ ವೇತನ ದೊರೆಯದೆ ಅವರ ಕುಟುಂಬ ಆರ್ಥಿಕ ಸಂಕಷ್ಟದಲ್ಲಿ ಸಿಲುಕುವಂತಾಗಿದೆ ಎಂದು ಸಿಐಟಿಯು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ತರಬೇಕು, ಬೆಲೆ ಏರಿಕೆ ಸೂಚ್ಯಂಕ ನಿಗದಿಯಲ್ಲಿನ ಮೋಸ ನಿಲ್ಲಿಸಬೇಕು, ಅಸಂಘಟಿತ ಕಾರ್ಮಿಕರಾದ ಮನೆಗೆಲಸದವರು, ಟೈಲರ್ಸ್‌, ಮೆಕಾನಿಕ್ಸ್ ಮುಂತಾದವರಿಗೆ ಸ್ಮಾರ್ಟ್‌ಕಾರ್ಡ್ ನೀಡಬೇಕು, 10ರೂ ಇದ್ದ ಕಾರ್ಮಿಕ ಸಂಘದ ನೋಂದಣಿ ಶುಲ್ಕವನ್ನು 100 ರೂ.ಗೆ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಲಾಯಿತು.

ಪ್ರತಿಭಟನೆ ಬಳಿಕ ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಸಿಐಟಿಯು ಪ್ರಧಾನ ಕಾರ್ಯದರ್ಶಿ ಜಯರಾಂ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Leave a Reply

Your email address will not be published. Required fields are marked *