ಸಿದ್ದರಾಮಯ್ಯ ವಿರುದ್ಧ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು

ನವದೆಹಲಿ: ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಸಾರ್ವಜನಿಕರೊಂದಿಗೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಸಿದ್ದರಾಮಯ್ಯ ಅವರು ಮಹಿಳೆಯ ಬಳಿಯಿದ್ದ ಮೈಕ್​ ಕಿತ್ತುಕೊಂಡಿದ್ದರು. ಇವರು ಮೈಕ್​ ಕಿತ್ತುಕೊಂಡು ಅನುಚಿತವಾಗಿ ವರ್ತಿಸಿದ ವಿಡಿಯೋ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುವಂತೆ ಕರ್ನಾಟಕ ಪೊಲೀಸರಿಗೆ ಸೂಚನೆ ನೀಡಿದೆ.