More

    ನೇಹಾ ಹಿರೇಮಠ ಕೊಲೆ ಪ್ರಕರಣ, ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

    ವಿಜಯಪುರ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ ಎಬಿವಿಪಿ ಪದಾಧಿಕಾರಿಗಳು ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿದರು.

    ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರಕರಣ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿ ಕೊಲೆಗಡುಕನ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು.
    ರಾಷ್ಟ್ರೀಯ ಕಲಾ ಮಂಚ್ ಪ್ರಾಂತ ಸಹ ಪ್ರಮುಖರಾದ ಸುರೇಖಾ ಕುಲಕರ್ಣಿ ಮಾತನಾಡಿ, ಶಾಲೆ-ಕಾಲೇಜುಗಳು ಜ್ಞಾನದ ದೇಗುಲಗಳು, ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ. ಇದರಿಂದ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ ಎಂದರು.

    ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ.
    ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ-ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕೆಂದರು.

    ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಮಾತನಾಡಿ, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದರು.

    ಸಿದ್ದು ಪತ್ತಾರ, ಪ್ರವೀಣ ಬಿರಾದಾರ, ಮಹಾಂತೇಶ ಕಂಬಾರ, ಸಂದೀಪ ಅರಳಗುಂಡಿ, ಶ್ರವಣ ಕಾತ್ರಾಳ, ರೇಖಾ ಮಾಳಿ, ಸುಜ್ಞಾತಾ ಕುಲಕರ್ಣಿ, ಪೂಜಾ ವೀರಶೆಟ್ಟಿ, ಜ್ಯೋತಿ ಸಜ್ಜನ, ಐಶ್ವರ್ಯ ಆಸಂಗಿ, ಬಾಲಾಜಿ ಬಿರಾದಾರ ಮತ್ತಿತರ ಸುಮಾರು 200ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಮಹದಾವರ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts