

ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು CM ಸಿದ್ದರಾಮಯ್ಯ ಹೇಳಿದರು.
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ವತಿಯಿಂದ ಆಯೋಜಿಸಿದ್ದ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು (AIISH), ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬ0ಧಿಸಿದ0ತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊ0ದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ. ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.