

ಲಖನೌ: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) 10 ಮಂದಿ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರದಲ್ಲಿ (Mirzapur) ನಡೆದಿದೆ.
ಮಿರ್ಜಾಪುರ- ವಾರಾಣಸಿ ಗಡಿಯಲ್ಲಿರುವ ಕಚವನ್ ಮತ್ತು ಮಿರ್ಜಾಮುರಾದ್ ನಡುವಿನ ಜಿ.ಟಿ ರಸ್ತೆಯಲ್ಲಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್, ಭದೋಹಿ ಜಿಲ್ಲೆಗೆ ಕಟ್ಟಡ ನಿರ್ಮಾಣಕ್ಕಾಗಿ ತೆರಳಿದ್ದ 13 ಜನರನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಕರೆತರಲಾಗುತ್ತಿತ್ತು. ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದು, ಮೂವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ FIR ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ತಿಳಿಸಿದ್ದಾರೆ.