

ನವದೆಹಲಿ: ಕಳೆದ ಕೆಲ ದಿನಗಳಿಂದ ಪಾಕಿಸ್ತಾನದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ 300ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದೀಗ ನಿರಂತರ ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ 9 ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಅಪ್ಪರ್ ದಿರ್ ಜಿಲ್ಲೆಯ ಪಟ್ರಾಕ್ ಪ್ರದೇಶದಲ್ಲಿ ಶುಕ್ರವಾರ ಈ ದುರಂತ ಸಂಭವಿಸಿದ್ದು, ಮನೆಯಲ್ಲಿ ಮಲಗಿದ್ದ ವೇಳೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಹಾಗೂ 9 ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ರಕ್ಷಣಾ ತಂಡದ ವಕ್ತಾರ ಬಿಲಾಲ್ ಸೈಫಿ, ನಿರಂತರ ಮಳೆಯಿಂದಾಗಿ ಸಂಭವಿಸಿದ ಭೂ ಕುಸಿತದಲ್ಲಿ 9 ಮಕ್ಕಳು, ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಮನೆಯಲ್ಲಿ ಇವರು ಮಲಗಿದ್ದ ವೇಳೆ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.
ಅವಶೇಷಗಳ ಅಡಿಯಿಂದ ಎಲ್ಲಾ 12 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ದೇಶದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ರಕ್ಷಣಾ ತಂಡದ ವಕ್ತಾರ ಬಿಲಾಲ್ ಸೈಫಿ ಹೇಳಿದ್ದಾರೆ.