13 ರಂದು ಕಾಂಗ್ರೆಸ್ ಅಭ್ಯರ್ಥಿಗಳೆಲ್ಲ ಮನೆಗೆ ಹೋಗುವರು

05. Pyp.02
ಪಿರಿಯಾಪಟ್ಟಣದ ಶ್ರೀ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು. ಸಿ.ಎಚ್.ವಿಜಯಶಂಕರ್, ದೇವರಹಳ್ಳಿ ಸೋಮಶೇಖರ್, ಎಂ.ಎಂ.ರಾಜೇಗೌಡ, ಎಚ್.ಸಿ.ಬಸವರಾಜು, ಕೆ.ಎನ್.ಸೋಮಶೇಖರ್ ಮತ್ತಿತರರು ಇದ್ದರು.
Published on

ಪಿರಿಯಾಪಟ್ಟಣ: ಮೇ 13 ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರದಿಂದ ನಿರಾಶರಾಗಿ ಹೊರ ಹೋಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಕಿದರು.
ಪಟ್ಟಣದ ಶ್ರೀ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಪರ ಮತಯಾಚಿಸಿ ಮಾತನಾಡಿದರು.
ಯಾವುದೋ ಕೆಲ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ಮಾಹಿತಿಯನ್ನು ನಂಬಬೇಡಿ. ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು ರಾಜ್ಯದಲ್ಲಿಯೂ ಇದೇ ಪರಿಸ್ಥಿತಿ ಬರಲಿದೆ. ರಾಜ್ಯದಲ್ಲಿ ನರೇಂದ್ರ ಮೋದಿ, ಅಮಿತ್ ಷಾ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮತ್ತಿತರರು ಪ್ರಚಾರ ನಡೆಸುತ್ತಿದ್ದು ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಶತಸ್ಸಿದ್ಧ ಎಂದು ವಿಶ್ವಾಸವ್ಯಕ್ತಪಡಿಸಿದರು.
ರಾಜ್ಯದಲ್ಲಿ ಎಲ್ಲ ಸಮಾಜದವರನ್ನು ಒಗ್ಗೂಡಿಸಿಕೊಂಡು ಹೋಗುವ ಏಕೈಕ ನಾಯಕ ಎಂದರೆ ಬಿ.ಎಸ್.ಯಡಿಯೂರಪ್ಪ ಮಾತ್ರ. 80 ವರ್ಷ ತುಂಬಿದ್ದರೂ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇನೆ ಎಂಬ ಸವಾಲನ್ನು ಸ್ವೀಕಾರ ಮಾಡಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗುತ್ತಾ ಇಡೀ ರಾಜ್ಯಾದ್ಯಂತ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರೆ ಇವರಿಗೆ ತಲೆ ಕೆಟ್ಟಿದೆ ಎಂದು ಹೀಯಾಳಿಸುತ್ತಿದ್ದರು. ಆದರೆ ಇಡೀ ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಸರ್ಕಾರ ರಚಿಸಲು ಕರ್ನಾಟಕದಲ್ಲಿ ಹೆಬ್ಬಾಗಿಲನ್ನು ತೆರೆದ ಶ್ರೇಯಸ್ಸು ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದರು.
ಡಿ.ದೇವರಾಜ ಅರಸು ಅವರ ನಂತರ ರಾಜ್ಯದಲ್ಲಿ ಎಲ್ಲ ಸಮಾಜದವರನ್ನು ಸಮಾನವಾಗಿ ಕಾಣುತ್ತಿರುವ ಏಕೈಕ ನಾಯಕ ಯಡಿಯೂರಪ್ಪ. ಬಡ ಕುಟುಂಬದಲ್ಲಿ ಹೆಣ್ಣು ಮಕ್ಕಳು ಜನಿಸಿದರೆ ಶಾಪ ಎಂದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ ಜಾರಿಗೆ ತಂದರು ಎಂದು ತಿಳಿಸಿದರು.
ರದ್ದಾದ ರೋಡ್ ಶೋ: ಹೆಲಿಕಾಪ್ಟರ್ ಮೂಲಕ ಪಿರಿಯಾಪಟ್ಟಣಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಾಹಿತಿ ನೀಡಲಾಗಿತ್ತು. ಆದರೆ ಅವರು ಬರುವುದು ವಿಳಂಬವಾಗಿದ್ದರಿಂದ ರೋಡ್ ಶೋ ರದ್ದುಗೊಳಿಸಿ ಸಭೆಯಲ್ಲಿ ಪಾಲ್ಗೊಂಡರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್, ಹುಣಸೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಮಾಜಿ ಶಾಸಕ ಎಚ್.ಸಿ.ಬಸವರಾಜು, ಮುಖಂಡರಾದ ಕೆ.ಎನ್.ಸೋಮಶೇಖರ್, ನಾಗರಾಜ್ ಮಲ್ಲಾಡಿ, ಪಿ.ವಿ.ಬಸವರಾಜಪ್ಪ, ವಿಕ್ರಂರಾಜ್, ಪ್ರಶಾಂತ್‌ಗೌಡ, ರಘುಕೌಟಿಲ್ಯ, ರಾಜೇಂದ್ರ, ಪಿ.ಜೆ.ರವಿ, ಬೆಮ್ಮತ್ತಿ ಚಂದ್ರು, ವೀರಭದ್ರ, ರಮೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net