

ಸಾಗರ: ನಗರದ ಗಾಂಧಿ ಮೈದಾನದಲ್ಲಿ ವಿಎಚ್‌ಪಿ ಮತ್ತು ಬಜರಂಗದಳದಿಂದ ಮಾ.17ರಂದು ಸಂಜೆ 5ಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಮತ್ತು ಹಿಂದು ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ಹೇಳಿದರು
ವಿಎಚ್‌ಪಿ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಶ್ರೀಕಾಂತ್ ಪರಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಜಡೆ ಸಂಸ್ಥಾನ ಮಠದ ಶ್ರೀ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡುವರು. ಬಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ, ಬಜರಂಗದಳ ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ, ಪ್ರತಿಮಾ ಸತೀಶ್ ಜೋಗಿ ಪಾಲ್ಗೊಳ್ಳುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು ಮಹಾಗಣಪತಿ ದೇವಸ್ಥಾನದಿಂದ ಶೋಭಾಯಾತ್ರೆ ನಡೆಯಲಿದೆ. ಯುವಜನರು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು ಎಂದರು.
ಬಜರಂಗದಳದ ಜಿಲ್ಲಾ ಸಂಯೋಜಕ ಸಂತೋಷ್ ಶಿವಾಜಿ ಮಾತನಾಡಿ, ಶಿವಾಜಿ ಜಯಂತಿ ಅಂಗವಾಗಿ ಜನರಲ್ಲಿ ಅರಿವು ಮೂಡಿಸಲು 15ರಂದು ಮಧ್ಯಾಹ್ನ ಗಣಪತಿ ದೇವಸ್ಥಾನದಿಂದ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ. 17ರಂದು ಮಧ್ಯಾಹ್ನ 2ಕ್ಕೆ ಮಹಾಗಣಪತಿ ದೇವಸ್ಥಾನದಿಂದ ಸಂಭ್ರಮದ ಶೋಭಾಯಾತ್ರೆ ಏರ್ಪಡಿಸಲಾಗಿದೆ. ಶೋಭಾಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಪಾಲ್ಗೊಳ್ಳಲಿವೆ. ಸಾರ್ವಜನಿಕರು, ಯುವಜನರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಘಟನೆಯಿಂದ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರಮುಖವಾಗಿ ಸೇವಾ ಸಪ್ತಾಹ ಅಂಗವಾಗಿ 600ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ. ಗೋವುಗಳ ಅಕ್ರಮ ಸಾಗಣೆ ತಡೆದು ರಕ್ಷಿಸಲಾಗಿದೆ. ಅಯೋಧ್ಯೆ ಯಾತ್ರೆ, ದತ್ತಪೀಠ ಯಾತ್ರೆ ಕೈಗೊಳ್ಳಲಿದೆ. ಬಿಡಾಡಿ ಗೋವುಗಳಿಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಲಾಗುತ್ತಿದೆ. ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣಾ ಶಿಬಿರ, ಭವಿಷ್ಯದ ಭಾರತಕ್ಕೆ ಯುವಪೀಳಿಗೆ ಪಾತ್ರ ಕುರಿತು ಉಪನ್ಯಾಸ ಮತ್ತಿತರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ರಾಮು ಚವ್ಹಾಣ್, ಸುನೀಲ್, ರುದ್ರಪ್ಪ, ಸೋಮು, ನವೀನ್ ಹಾಜರಿದ್ದರು.