

Pahalgam Terror attack : ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿರುವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತೀಚೆಗೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ಮಾತನಾಡಿದ ಸುಮಾರು 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರು ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದವರು ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಕೇಂದ್ರ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ಗಮನ ಹರಿಸಿದೆ. ಉಗ್ರರ ದಾಳಿಯನ್ನು ಬೆಂಬಲಿಸಿ ಮಾತನಾಡುವವರ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಈಗಾಗಲೇ ಎಚ್ಚರಿಸಿದೆ.
ಇದೇ ಸಮಯದಲ್ಲಿ ಪಹಲ್ಗಾಮ್ ದಾಳಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ಪಾಕಿಸ್ತಾನ ಜಿಂದಾಬಾದ್‌ನಂತಹ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಅಸ್ಸಾಂ, ಮೇಘಾಲಯ ಮತ್ತು ತ್ರಿಪುರದ ಒಟ್ಟು 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ 19 ಜನರಲ್ಲಿ 14 ಜನರು ಅಸ್ಸಾಂನವರು ಎಂದು ಪೊಲೀಸರು ಗುರುತಿಸಿದ್ದಾರೆ.
ಈ ಬಂಧನದ ಬೆನ್ನಲ್ಲೇ ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರಿಗೆ ಎಚ್ಚರಿಕೆ ನೀಡಿದ್ದಾರೆ. ಭಯೋತ್ಪಾದಕ ದಾಳಿಯಾಗಿರಲಿ ಅಥವಾ ಇನ್ಯಾವುದೇ ಆಗಿರಲಿ ದೇಶದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಅಗತ್ಯವಿದ್ದರೆ, ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ಅವರ ಮೇಲೆ ಹೇರಲಾಗುವುದು. ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಹೋಲಿಕೆಗಳಿಲ್ಲ. ಎರಡೂ ದೇಶಗಳು ಶತ್ರು ರಾಷ್ಟ್ರಗಳು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ನಿನ್ನೆ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಕಾಶ್ಮೀರದ ಸೌಂದರ್ಯವನ್ನು ನೋಡಲು ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಇಸ್ರೇಲ್ ಮತ್ತು ಇಟಲಿಯ ತಲಾ ಒಬ್ಬರು, ಇಬ್ಬರು ಸ್ಥಳೀಯರು, ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 26 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ‘ದಿ ರೆಸಿಸ್ಟನ್ಸ್ ಫ್ರಂಟ್’ ವಹಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸುವಾಗ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಪ್ರವಾಸಿಗರನ್ನು ಸುತ್ತುವರೆದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಕೆಲವು ಭಯೋತ್ಪಾದಕರು, ಹೆಸರುಗಳನ್ನು ಕೇಳುತ್ತಾ ಮತ್ತು ಗುರುತಿನ ಚೀಟಿಗಳನ್ನು ನೋಡುತ್ತಾ, ಹಿಂದೂಗಳನ್ನು ಗುಂಡು ಹಾರಿಸಿ ಕೊಂದರು. ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡಂತೆ ತೋರುತ್ತದೆ. ಇಡೀ ಜಗತ್ತು ಈ ಘಟನೆಯನ್ನು ಖಂಡಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡದೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್)