

ಬೆಂಗಳೂರು: ರಾಜ್ಯದ ಕರಾವಳಿ ಭಾಗದ ಮೂರೂ ಜಿಲ್ಲೆಗಳಲ್ಲಿ ಗುರುವಾರದಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ಮಧ್ಯಮ ಪ್ರಮಾಣದ ಮಳೆಯಾಗುತ್ತಿದೆ. ಮುಂಗಾರು ಕೊನೆಗೊಳ್ಳುವ ಮುನ್ನ ದಕ್ಷಿಣಕನ್ನಡ, ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರು ಹಾಗೂ ಮೈಸೂರು ಸುತ್ತಲಿನ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಕಂಡುಬರಲಿದ್ದು, ಕೆಲವೊಮ್ಮೆ ಹಗುರ ಅಥವಾ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.