ಮಣಿಪುರದಲ್ಲಿ ಭೂಕುಸಿತ, ಪ್ರವಾಹದಿಂದ 3 ಮಂದಿ ಮೃತ್ಯು

manipur
Published on

ಇಂಫಾಲ: ಮಣಿಪುರದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ.

ಸೇನಾಪತಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ 34 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ಜಿಲ್ಲೆಯಲ್ಲಿ ಸೇನಾಪತಿ ನದಿ ಉಕ್ಕಿ ಹರಿಯುತ್ತಿದೆ.

ರಾಜಧಾನಿ ಇಂಫಾಲ್‌ನಲ್ಲಿ ಭಾರೀ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಇಂಫಾಲ್, ನಂಬುಲ್ ಮತ್ತು ಕೊಂಗ್ಬಾ ಸೇರಿದಂತೆ ಎಲ್ಲಾ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ನೂರಾರು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು, ಮನೆಗಳು ಮತ್ತು ಪ್ರಮುಖ ಕಟ್ಟಡಗಳಿಗೆ ನೀರು ನುಗ್ಗಿದೆ.

ಬುಧವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇಂಫಾಲ್ ಪೂರ್ವ ಜಿಲ್ಲೆಯ ಕೀರಾಂಗ್, ಖಬಾಮ್ ಮತ್ತು ಲೈರಿಯೆಂಗ್‌ಬಾಮ್ ಲೈಕೈ ಬಳಿ ಇಂಫಾಲ್ ನದಿಯ ದಡ ಒಡೆದಿದೆ. ಸಾವಿರಾರು ಮಂದಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅರೆ ಮಿಲಿಟರಿ ಸಿಬ್ಬಂದಿ, ಮಣಿಪುರ ಪೊಲೀಸರು ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಎನ್‌ಡಿಆರ್‌ಎಫ್ ತಂಡವು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ಇಂಫಾಲ್‌ಗೆ ಆಗಮಿಸಿದೆ.

ಕೆಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, ನದಿ ದಡಗಳು ಒಡೆದಿರುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಮತ್ತು ಜಾನುವಾರುಗಳಿಗೆ ತೊಂದರೆಯಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net