

ಕೋಲಾರ: ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಬೈಕ್ ಮತ್ತು ಇನ್ನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮಹೇಶ (೪೫) , ಉದ್ವಿತ (೨), ರತ್ನಮ್ಮ (೬೦) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರ ಗುರುತು ಸಿಕ್ಕಿದೆ. ಆದರೆ, ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಗಂಭೀರವಾಗಿ ಗಾಯಗೊಂಡಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಮೃತರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರು ಎಂದು ವರದಿಯಾಗಿದೆ. ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.