

ಪಾಲಕ್ಕಾಡ್: ಸಿಮೆಂಟ್ ತುಂಬಿದ್ದ ಲಾರಿಯೊಂದು (Cement Truck) ಸ್ಕಿಡ್ ಆಗಿ ಉರುಳಿದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಕೇರಳದ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ ಕಲ್ಲಡಿಕೋಡ್ ಪನಯಂಬಡ ಎಂಬಲ್ಲಿ ನಡೆದಿದೆ.
ಡಿಸೆಂಬರ್ 12ರ ಸಂಜೆ 4 ಘಂಟೆ ಸುಮಾರಿಗೆ ನಡೆದಿದ್ದು, ಶಾಲೆ ಮುಗಿಸಿ ಬಸ್ಗಾಗಿ ಕಾಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಇರ್ಫಾನಾ, ಮಿತಾ, ರಿದಾ ಮತ್ತು ಆಯೇಶಾ ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಸಿಮೆಂಟ್ ತುಂಬಿದ್ದ ಲಾರಿಯೊಂದು (Cement Truck) ವೇಗವಾಗಿ ಚಲಿಸುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಿದ್ಯಾರ್ಥಿಗಳ ಮೇಲೆ ಉರುಳಿದೆ. ಲಾರಿ ಬಿದ್ದ ರಭಸಕ್ಕೆ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ರಸ್ತೆಯನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸದ ಕಾರಣ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದ್ದಾರೆ. ಎಷ್ಟೇ ದೂರು ನೀಡಿದರು ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ಕೂಟತಿಲ್ ವಿಚಾರವನ್ನು ಸಂಬಂಧಪಟ್ಟವರ ಗಮನಕ್ಕೆ ತಂದು ಶೀಘ್ರ ಪರಿಹಾರ ಕಾರ್ಯ ಮಾಡಿಕೊಡುವುದಾಗಿ ಭರವಸೆ ನೀಡಿದರು.