

ಶಿಮ್ಲಾ: ಚಾಲಕನ ನಿಯಂತ್ರಣ ತಪ್ಪಿ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ್ದ ಬಸ್ಸೊಂದು ಆಳವಾದ ಕಂದಕಕ್ಕೆ ಬಿದ್ದಿರುವ ಘಟನೆ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ.
ಮಂಡಿ ಜಿಲ್ಲೆಯ ಮಂಡಿ ಜಿಲ್ಲೆಯ ಕರ್ಸೋಗ್ ಉಪವಿಭಾಗದ ಖರೋಡಿ ಬಳಿ ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯ ಸಾಂಬಶಿವಂ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ್ದ ಬಸ್ನ ಚಾಲಕ-ನಿರ್ವಾಹಕ ಸೇರಿದಂತೆ ಹಲವು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಪ್ರಕಾರ ಬಸ್ ಕಂದಕಕ್ಕೆ ಉರುಳಿದ ಸಮಯದಲ್ಲಿ ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ಗಾಯಾಳುಗಳನ್ನು ಮಂಡಿಯಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಯ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೇ ನಡೆಸಲಾಗುತ್ತಿದೆ ಎಂದು ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯ ಸಾಂಬಶಿವಂ ತಿಳಿಸಿದ್ದಾರೆ.