

ಬೆಂಗಳೂರು:ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಎಚ್.ಎನ್.ನಾಗಮೋಹನ್‌ದಾಸ್ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ(SIT ) ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ವಿಧಾನಸೌಧದ ಸಭಾಂಗಣದಲ್ಲಿ ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿರು.
ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ವಿಚಾರಣಾ ಆಯೋಗ ದೂರುಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. 3 ಲಕ್ಷ ಕಾಮಗಾರಿಗಳಲ್ಲಿ ಪೈಕಿ ಆಯೋಗವು 1729 ಕಾಮಗಾರಿಗಳ ಬಗ್ಗೆ ವಿಸ್ತೃತವಾಗಿ ಪರಿಶೀಲನೆ ನಡೆಸಲಾಗಿದೆ. ಕೆಲವುಗಳಲ್ಲಿ ಕಾಮಗಾರಿಗಳಲ್ಲಿ ಅನುದಾನಕ್ಕಿಂತ ಹೆಚ್ಚು ಕಾಮಗಾರಿಯನ್ನು ನೀಡಲಾಗಿದೆ ಎಂದು ವಿವರಿಸಿದರು.
ಕೆಲವುಗಳಲ್ಲಿ ಅಲ್ಪ ಅನುದಾನ ಬಿಡುಗಡೆಯಾಗಿದ್ದರೂ, ಅದಕ್ಕೂ ಮೀರಿದ ಪಾವತಿಯಾಗಿದೆ. ಕೆಲವುಗಳಲ್ಲಿ ಕಾಮಗಾರಿ ನಿರ್ವಹಿಸಿರುವುದರ ಬಗ್ಗೆ ಸಂಶಯವಿದೆ. ಕೆಲವುಗಳಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಬೇರೆಯವರಿಂದ ಹಸ್ತಕ್ಷೇಪವಾಗಿರುವುದನ್ನು ಆಯೋಗವು ಮಾಹಿತಿ ತಿಳಿಸಿದೆ.
ಸಚಿವ ಸಂಪುಟ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ವಿಚಾರಣಾ ಆಯೋಗದ ವರದಿಯ ಮೇಲೆ ಎಸ್ಐಟಿಯನ್ನು ರಚಿಸಲು ನಿರ್ಧರಿಸಲಾಗಿದೆ. ಇದರಲ್ಲಿ ಅಗತ್ಯವಿರುವ ಪರಿಣಿತರನ್ನು ನಿಯೋಜಿಸಿ, ಎರಡು ತಿಂಗಳಲ್ಲಿ ವರದಿಯನ್ನು ಸಲ್ಲಿಸಲು ಎಸ್ಐಟಿಗೆ ಸೂಚನೆ ನೀಡಲು ಸಚಿವಸಂಪುಟ ತೀರ್ಮಾನ ಕೈಗೊಂಡಿದ್ದು ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಅಪೂರ್ಣ ಮಾಹಿತಿಗಳಿರುವ ಬಗ್ಗೆ ವಿಚಾರಣಾ ಆಯೋಗ ತಿಳಿಸಿರುವುದರಿಂದ, ಸಂಬಂಧಪಟ್ಟ ಇಲಾಖೆಯವರೂ ಎಸ್ ಐ ಟಿ ಯವರು ಈ ಬಗ್ಗೆ ಕೇಳುವ ಮಾಹಿತಿಗಳನ್ನು ಒದಗಿಸಲು ಸೂಚನೆಯನ್ನು ನೀಡಲಾಗಿದೆ ಎಂದರು.