

ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾದಲ್ಲಿ ನಡೆದಿದೆ.
ಘಟನೆಯು ರಾಷ್ಟ್ರೀಯ ಹೆದ್ದಾರಿ 43ರಲ್ಲಿ ಸಂಭವಿಸಿದ್ದು, ಘುಂಗುಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಜ್ಗಾವಾ ಗ್ರಾಮದ ಬಳಿ ಬೆಳಗಿನ ಜಾವ 3 ಘಂಟೆ ಸುಮಾರಿಗೆ ಅಪಘಾತ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಹಾಯಕ ಸಬ್ಇನ್ಸ್ಪೆಕ್ಟರ್ ಶೈಲೇಂದ್ರ ಚತುರ್ವೇದಿ ಉಮಾರಿಯಾದಿಂದ ಶೆಹದೋಲ್ ಕಡೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತರೆಲ್ಲರೂ 30-35 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದ್ದು, ಅವರ ಕುಟುಂಬದ ಸದಸ್ಯರನ್ನು ಸಂಪರ್ಕಿಸಲಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಹಾಯಕ ಸಬ್ಇನ್ಸ್ಪೆಕ್ಟರ್ ಶೈಲೇಂದ್ರ ಚತುರ್ವೇದಿ ತಿಳಿಸಿದ್ದಾರೆ.