ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ರೂ. ಪರಿಹಾರ: ಗಾಯಗೊಂಡವರಿಗೆ 5 ಸಾವಿರ ರೂ. ನೆರವು; ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ

highcourt
Published on

ಬೆಂಗಳೂರು: ಬೀದಿನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವಹಾನಿಗೆ 5 ಲಕ್ಷ ರೂ. ಪರಿಹಾರ ನೀಡುವ ನಿಯಮ ಶೀಘ್ರ ಜಾರಿಗೆ ಬರುವ ಸಾಧ್ಯತೆ ಇದೆ. ಈ ಸಂಬಂಧ ರ್ಚಚಿಸಲಾಗಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದೆ.

ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯ್್ಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಕುರಿತು ರ್ಚಚಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಂದಿನ 4 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿತು.

ಪ್ರಾಣಿ ಪೋಷಣೆ, ಲಸಿಕಾ ವಿಧಾನ ಮತ್ತು ಇನ್ನಿತರ ಶ್ವಾನ ಸಂಬಂಧಿ ವಿಷಯಗಳನ್ನು ಪ್ರತಿಯೊಬ್ಬರೂ ತಿಳಿದಿರಬೇಕಿದೆ. ಸರ್ಕಾರವು ಶ್ವಾನಗಳ ಕುರಿತು ಜಾಹೀರಾತು, ಕಿರುಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಪ್ರಸಾರ ಮಾಡಬೇಕು. ಜತೆಗೆ ವಾರ್ತಾ ಮತ್ತು ಪ್ರಚಾರ ಇಲಾಖೆ ಮೂಲಕ ವ್ಯಾಪಕ ಪ್ರಚಾರ ನೀಡಿ ಜಾಗೃತಿ ಮೂಡಿಸಬೇಕು ಎಂದು ನ್ಯಾಯಪೀಠ ಸೂಚಿಸಿತು.

ಆಹಾರ ನೀಡಲು ಮಾರ್ಗಸೂಚಿ: ಬೀದಿ ನಾಯಿಗಳಿಗೆ ಆಹಾರ ನೀಡಲು ಪ್ರಾಣಿ ಕಲ್ಯಾಣದ ಮಂಡಳಿ ಅನ್ವಯ ( ಎಡಬ್ಲ್ಯುಬಿ) ನಿರ್ದಿಷ್ಟ ಮಾರ್ಗಸೂಚಿ ಇದೆ. ಸಾಮಾನ್ಯರಿಗೆ ಈ ಕುರಿತು ಅಷ್ಟಾಗಿ ತಿಳಿದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸ್ಥಳೀಯ ಸಂಸ್ಥೆಗಳ ಜತೆಗೂಡಿ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net