

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಬುಧವಾರ ರಾತ್ರಿ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ.
ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಯ ಬಿಡುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜಲಾಶಯಕ್ಕೆ ಬೆಳಗ್ಗೆ 33,640 ಕ್ಯೂಸೆಕ್ ನೀರು ಹರಿದು ಬರುತಿತ್ತು. ಹೀಗಾಗಿ ಜಲಾಶಯದಿಂದ ನದಿಗೆ 33,625 ಕ್ಯೂಸೆಕ್ ನೀರು ಹರಿಯ ಬಿಡಲಾಗುತಿತ್ತು. ಅದರೆ, ರಾತ್ರಿ ಒಳ ಹರಿವಿನ ಪ್ರಮಾಣ ದಿಢೀರಾಗಿ 38,660 ಕ್ಯೂಸೆಕ್‌ಗೆ ಏರಿಕೆಯಾದ ಹಿನ್ನೆಲೆಯಲ್ಲಿ 50 ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗಿದೆ.
ಜಲಾಶಯಕ್ಕೆ ಜು.16 ರಂದು 22,840 ಕ್ಯೂಸೆಕ್, 15 ರಂದು 20,217 ಕ್ಯೂಸೆಕ್, 14 ರಂದು 12,910 ಕ್ಯೂಸೆಕ್ ನೀರು ಹರಿದು ಬಂದಿತ್ತು. ಕೇರಳದ ವಯನಾಡು ಹಾಗೂ ಕಬಿನಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. 2284 ಅಡಿಗಳಷ್ಟು ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2282.12 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2270.37 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು.