6 ಐಎಎಸ್ ಅಧಿಕಾರಿಗಳ ವಿರುದ್ಧ ನಿಂದನೆ ಪ್ರಕರಣ: ನಿರ್ಣಯ ಕೈಗೊಳ್ಳದಂತೆ ಸಿಎಟಿಗೆ ‘ಹೈ’ ನಿರ್ದೇಶನ

highcourt
Published on

ಬೆಂಗಳೂರು: ಕೆಎಎಸ್‌ನಿಂದ ಐಎಎಸ್ ವೃಂದಕ್ಕೆ ಬಡ್ತಿ ನೀಡುವ ವಿಚಾರವಾಗಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ರಾಜ್ಯದ 6 ಐಎಎಸ್ ಅಧಿಕಾರಿಗಳ ವಿರುದ್ಧ ನಿಂದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ ನಿರ್ಣಯ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಈ ಪ್ರಕರಣದಲ್ಲಿ ಹಿಂದೆ ನೀಡಲಾಗಿರುವ ಮಧ್ಯಂತರ ಆದೇಶವನ್ನೂ ವಿಸ್ತರಿಸಲಾಗಿದೆ.

ಕೆಎಎಸ್ ಅಧಿಕಾರಿ ನಿವೃತ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪ್ರಕರಣದಲ್ಲಿ ಸಿಎಟಿ ನೀಡಿರುವ ಬಹುಮತದ ತೀರ್ಪು ಹಾಗೂ ತಮ್ಮ ವಿರುದ್ಧದ ನಿಂದನಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಸೇರಿ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ಸಿ.ಎಂ. ಜೋಷಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು, ತಾವು ಈ ಹಿಂದೆ ಕೇಂದ್ರ ಸರ್ಕಾರ ಪ್ರತಿನಿಧಿಸುತ್ತಿರುವಾಗ ಇಂತಹ ಅನೇಕ ಪ್ರಕರಣಗಳಲ್ಲಿ ಹಾಜರಾಗಿದ್ದಿದೆ. ಹಾಗಾಗಿ ಈ ಅರ್ಜಿಯು ನನ್ನ ಹೊರತಾದ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಲಿ.

ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ಸೂಕ್ತ ನಿರ್ದೇಶನ ಪಡೆದು ಸಂಬಂಧಪಟ್ಟ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ರಿಜಿಸ್ಟ್ರಿಗೆ ನಿರ್ದೇಶನ ನೀಡಿದರು. ಪ್ರಕರಣದಲ್ಲಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶ ಮುಂದಿನ ವಿಚಾರಣಾ ದಿನಾಂಕದವರೆಗೆ ಮುಂದುವರಿಯಲಿದೆ ಎಂದು ಹೇಳಿ ವಿಚಾರಣೆ ಮುಂದೂಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net