

ಬೆಂಗಳೂರು: ಕನ್ನಡ ನಾಡಿನಾದ್ಯಂತ ಇಂದು 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಮಸ್ತ ಕನ್ನಡಿಗರಿಗೆ ಟ್ವೀಟ್ ಮೂಲಕ ಶುಭಕೋರಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.
ಒಂದಾಗಲು ಸಿಎಂ ಬಿಎಸ್ವೈ ಕರೆ
ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಸಿಎಂ ಬಿಎಸ್ವೈ ಶುಭ ಹಾರೈಸಿದ್ದಾರೆ.
ನಾನು ಮೊದಲು ಕನ್ನಡಿಗ ಅಂದ್ರು ಮಾಜಿ ಸಿಎಂ
ಕನ್ನಡ ರಾಜ್ಯೋತ್ಸವ ಎಂದರೆ ನಮ್ಮ ಜನ, ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ. ಆ ಪುಣ್ಯಪುರುಷರನ್ನು ಒಡಲಾಳದ ಕೃತಜ್ಞತೆಯಿಂದ ಸ್ಮರಿಸೋಣ. ಕನ್ನಡ ಮೊದಲು, ನಾನು ಮೊದಲು ಕನ್ನಡಿಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.