₹6,700 ಕೋಟಿ ರೂ. ಖರ್ಚಾಗಿದ್ದೆಲ್ಲಿ? ವಿವರ ಒದಗಿಸಲು ಹೈಕೋರ್ಟ್ ಸೂಚನೆ ಅಧಿಕಾರಿಗಳ ಉದಾಸೀನಕ್ಕೆ ಕಿಡಿ

highcourt
Published on

ಬೆಂಗಳೂರು : ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮಕ್ಕಳ ಕಲ್ಯಾಣಕ್ಕಾಗಿ ₹6,700 ಕೋಟಿ ಹೇಗೆ ಬಳಕೆಯಾಗಿದೆ ಎಂಬ ಬಗ್ಗೆ ಸಮರ್ಪಕ ವಿವರ ಸಲ್ಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಾರವಾಗಿ ಹೇಳಿದೆ.

ಈ ಸಂಬಂಧ, ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹಾಗೂ ಮತ್ತಿತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಾದ ಆಲಿಸಿದ ನ್ಯಾಯಪೀಠ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರು ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ತಕ್ಷಣವೇ ನೆರವು ನೀಡಲು ಜಾರಿ ಮಾಡಿದ್ದ ಮಧ್ಯಂತರ ಆದೇಶ ಪಾಲಿಸದ ಮಂಡಳಿಯ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮುಂದುವರಿದು ಬಿಸಿಲು, ಮಳೆ ಲೆಕ್ಕಿಸದೆ ಕಷ್ಟಪಟ್ಟು ದುಡಿಯುವ ಕಟ್ಟಡ ಕಾರ್ಮಿಕರ ದುಡಿಮೆಯಿಂದಾಗಿ ಸಾವಿರಾರು ಕೋಟಿ ರೂಪಾಯಿ ಸೆಸ್ ಸಂಗ್ರಹವಾಗುತ್ತಿದ್ದರೂ ಅದನ್ನು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡದೆ, ಅಧಿಕಾರಿಗಳು ಐಷಾರಾಮಿ ಜೀವನ ಸಾಗಿಸುತ್ತಿರುವುದು ದುಃಖಕರ. ಮುಂದಿನ ವಿಚಾರಣೆ ವೇಳೆ ಈ ಕುರಿತು ನ್ಯಾಯಪೀಠಕ್ಕೆ ವಿವರ ಒದಗಿಸುವಂತೆ ಆದೇಶಿಸಿದೆ.

ಪ್ರಕರಣವೇನು?

ಏ. 23ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ನಾಲ್ಕು ವಾರದೊಳಗೆ ಎಲ್‌ಎಲ್‌ಬಿ ಹಾಗೂ ಎಂಬಿಎ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಬೇಕೆಂದು ಆದೇಶಿಸಿತ್ತು.

ಅರ್ಜಿಯು ಪುನಃ ಜೂನ್.7ರಂದು ವಿಚಾರಣೆಗೆ ಬಂದಾಗ ಸಂಗ್ರಹವಾಗಿರುವ ₹6,700 ಕೋಟಿ ಸೆಸ್, ಅದು ಹೊಂದಿರುವ ಬ್ಯಾಂಕ್ ಖಾತೆಯ ವಿವರಗಳು ಹಾಗೂ ಯಾವ ಸೌಲಭ್ಯಗಳಿಗೆ ಎಷ್ಟು ಖರ್ಚು ಮಾಡಲಾಗುತ್ತಿದೆ ಎನ್ನುವ ವಿವರಗಳನ್ನು ಒಳಗೊಂಡ ಪ್ರಮಾಣ ಪತ್ರ ಸಲ್ಲಿಸಿ ಎಂದು ಆದೇಶಿಸಿ ಜೂ.14ಕ್ಕೆ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net