

ಲಖನೌ: ವೇಗವಾಗಿ ಬಂದ ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನವ ವಧು-ವರ ಸೇರಿದಂತೆ ಏಳು ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ. ನಸುಕಿನ ಜಾವ ದಟ್ಟ ಮಂಜು ಕವಿದಿದ್ದರಿಂದ ದುರ್ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಬಿಜ್ನೋರ್ ಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ವರ ಬಿಜ್ನೋರ್ನ ಧಂಪುರದ ನಿವಾಸಿಯಾಗಿದ್ದು, ಶುಕ್ರವಾರ (ನವೆಂಬರ್ 15) ಸಂಜೆ ಜಾರ್ಖಂಡ್ನಲ್ಲಿ ಮದುವೆ ನಡೆದಿತ್ತು. ಮದುವೆ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ನವದಂಪತಿಗಳಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳು ಹಳ್ಳಕ್ಕೆ ಉರುಳಿದ್ದು, ನವವಿವಾಹಿತರು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ.
ವಾಹನದಲ್ಲಿ ವಧು, ವರ, ಅವರ ಚಿಕ್ಕಮ್ಮ ಮತ್ತು ಅವರ ಸಹೋದರ ಸೇರಿದಂತೆ 11 ಮಂದಿ ಇದ್ದರು ಎಂದು ಹೇಳಲಾಗಿದೆ. ಉಳಿದಂತೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಟ್ಟ ಮಂಜಿನಿಂದಾಗಿ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸುತ್ತಿರಲಿಲ್ಲ ಆ ಕಾರಣದಿಂದಲ್ಲೇ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದುಮ ತನಿಖೆ ನಡೆಸಲಾಗುತ್ತಿದೆ ಎಂದು ಬಿಜ್ನೋರ್ ಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.