ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 8 ಮಂದಿ ಸಾವು, ಹಲವರು ಗಂಭೀರ

Sivakasi
Published on

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿ ನಡೆದಿದೆ.

ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು, ಶಿವಕಾಶಿಯ ನಿರ್ಜನ ಪ್ರದೇಶದಲ್ಲಿ ಕಾರ್ಖಾನೆ ನಡೆಸಲಾಗುತ್ತಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಪ್ರತಿನಿತ್ಯದಂತೆ ಗುರುವಾರವೂ ಕಾರ್ಖಾನೆಯಲ್ಲಿ ಪಟಾಕಿ ತಯಾರಿಸುವ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದರು. ಕಾರ್ಖಾನೆಯಲ್ಲಿ ಇದ್ದಕ್ಕಿದ್ದಂತೆ ಪಟಾಕಿ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ.

ಸ್ಫೋಟದ ಶಬ್ದಕ್ಕೆ ಸ್ಥಳೀಯರು ಕೂಡಲೇ ಅಗ್ನಿಶಾಮಕ ಹಾಗೂ ಪೊಲೀಸರಿಗೆ ಫೋನ್​ ಮಾಡಿ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಕಾರ್ಖಾನೆಯೊಳಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಕಾರ್ಖಾನೆಯೊಳಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಲ್ಲಿಯವರೆಗೆ ಅಗ್ನಿಶಾಮಕ ದಳದ ತಂಡವು ಒಟ್ಟು ಎಂಟು ಮೃತದೇಹಗಳನ್ನು ಪತ್ತೆ ಮಾಡಿದ್ದು, ಅದರಲ್ಲಿ ಐದು ಮಹಿಳೆಯರು ಮತ್ತು ಮೂವರು ಪುರುಷರ ಮೃತದೇಹಗಳು ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದುಮ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net