

ಮುಂಬೈ: ಬಹುಮಹಡಿ ಕಟ್ಟಡ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಬಾಲಕ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಕಾಂದಿವಲಿ ಪಶ್ಚಿಮ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಗ್ಲೋರಿ ವಾಲ್ಫಾಟಿ (43) ಮತ್ತು ಜೋಸು ಜೆಮ್ಸ್ ರಾಬರ್ಟ್ (8) ಎಂದು ಗುರುತಿಸಲಾಗಿದೆ. ಗಾಯಗೊಂಡವರ ಪೈಕಿ ಓರ್ವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಎಂಸಿಯ ಹಿರಿಯ ಅಧಿಕಾರಿಯೊಬ್ಬರು, ಮೊದಲನೇ ಮಹಡಿಯಲ್ಲಿ ವಿದ್ಯುತ್ ಸಂಬಂಧಿತ ಕೆಲಸ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಥದಲ್ಲಿ ಇಡೀ ಕಟ್ಟಡವನ್ನೆ ಆವರಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಓರ್ವ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಯ ಹಿರಿಯ ಅಧಿಕಾರೊಯೊಬ್ಬರು ತಿಳಿಸಿದ್ದಾರೆ.