

ಬೆಂಗಳೂರು: ರಾಜ್ಯದಲ್ಲಿ ಬುಧವಾರ 20 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.
ಹೃದಯ ಸಂಬಂಧಿ ಸಮಸ್ಯೆ ಹೊಂದಿದ್ದ 44 ವರ್ಷದ ವ್ಯಕ್ತಿ ನ.23ರಂದು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಡಿ.16ರಂದು ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹೊಂದಿದ್ದ 76 ವರ್ಷದ ವೃದ್ಧ, ಸೆ.12ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡಿ.17ರಂದು ಮೃತಪಟ್ಟಿದ್ದಾರೆ. ಇಬ್ಬರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಎರಡು ಡೋಸ್ ಲಸಿಕೆ ಪಡೆದವರಾಗಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 808 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೋಂಕಿನ ಪ್ರಮಾಣ ಶೇ. 2.47 ವರದಿಯಾಗಿದೆ. ಬೆಂಗಳೂರಿನಲ್ಲಿ 359 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, 19 ಮಂದಿಗೆ ಸೋಂಕು ತಗುಲಿದ್ದು, ಬಳ್ಳಾರಿಯಲ್ಲಿ ಎರಡು, ಚಿಕ್ಕಮಗಳೂರಲ್ಲಿ 4, ದಕ್ಷಿಣ ಕನ್ನಡ ಹಾಗೂ ತುಮಕೂರಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. ಸೋಂಕಿತರಲ್ಲಿ 72 ಮಂದಿ ಮನೆ ಆರೈಕೆಗೆ ಒಳಗಾದರೆ, 20 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಏಳು ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಸೋಂಕಿತರಲ್ಲಿ ಐವರು ಬುಧವಾರ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.