ಸಂತ್ರಸ್ತೆಯರ ಧ್ವನಿಯಾಗದ ಪ್ರಮೀಳಾ ನಾಯ್ಡು: ಮಹಿಳಾ ಆಯೋಗದ ವಜಾಗೆ ಎಎಪಿ ಆಗ್ರಹ

Pramila Naydu
Published on

ಬೆಂಗಳೂರು: ನಾಡಿನ ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಮಹಿಳಾ ಆಯೋಗವು ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಆಮ್‌ ಆದ್ಮಿ ಪಕ್ಷವು, ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು ವಜಾ ಮಾಡಿ ನೂತನ ಆಯೋಗ ರಚಿಸುವಂತೆ ಆಗ್ರಹಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲ ಸ್ವಾಮಿ, ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯಲು ಮಾತ್ರವೇ ಸೀಮಿತರಾಗಿದ್ದಾರೆ. ರಾಜ್ಯಾದ್ಯಂತ ಮಹಿಳೆಯರ ಮೇಲೆ ಕಿರುಕುಳ, ದೌರ್ಜನ್ಯ, ಅತ್ಯಾಚಾರ ಪ್ರಕರಣ ಹೆಚ್ಚುತ್ತಲೇ ಇದೆ. ಇವುಗಳ ತಡೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಕನಿಷ್ಠ ಸೌಜನ್ಯವನ್ನೂ ಆಯೋಗದ ಅಧ್ಯಕ್ಷರು ತೋರುತ್ತಿಲ್ಲ. ಪೊಲೀಸ್‌ ಇಲಾಖೆ ಮೇಲೆ ಹಿಡಿತ ಸಾಧಿಸುವಲ್ಲಿ ಆಯೋಗ ವಿಫಲವಾಗಿದೆ. ರಾಜ್ಯದ ಜನತೆಗೆ ಆಯೋಗದ ಮೇಲೆ ವಿಶ್ವಾಸವೇ ಇಲ್ಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿ ಏಜೆಂಟರೋ? ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ರಾಜ್ಯದಲ್ಲಿ ಪ್ರತಿದಿನ ಸರಾಸರಿ ಒಂದಕ್ಕಿಂತ ಹೆಚ್ಚು ಅತ್ಯಾಚಾರ ಪ್ರಕರಣ ನಡೆಯುತ್ತಿದ್ದರೂ ಆಯೋಗ ನಿದ್ರಾವಸ್ಥೆಯಲ್ಲಿ ಇರುವುದು ಖಂಡನೀಯ. ಬಾಲ್ಯ ವಿವಾಹಗಳು ಎಗ್ಗಿಲ್ಲದೆ ನಡೆಯುತ್ತಿವೆ. ಕಾಟಾಚಾರಕ್ಕೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗುತ್ತಿದೆಯೇ ಹೊರತು, ಆರೋಪಿಗಳಿಗೆ ಶಿಕ್ಷೆ ಆಗುತ್ತಿಲ್ಲ. ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಬದಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ನೂತನ ಆಯೋಗ ರಚಿಸಲಿ ಎಂದು ಕುಶಲ ಸ್ವಾಮಿಯವರು ಆಗ್ರಹಿಸಿದರು.

ಆಮ್‌ ಆದ್ಮಿ ಪಕ್ಷದ ಮುಖಂಡೆ ಉಷಾ ಮೋಹನ್‌ ಮಾತನಾಡಿ, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಸ್ವಾತಿ ಮಾಲಿವಾಲ್‌ ಅವರನ್ನು ದೇಶವೇ ಕೊಂಡಾಡುತ್ತಿದೆ. ನಮ್ಮ ಕರ್ನಾಟಕದ ಮಹಿಳಾ ಆಯೋಗಕ್ಕೂ ಅಂತಹ ಅಧ್ಯಕ್ಷರ ಅಗತ್ಯವಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಗಮನ ವಹಿಸಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net