

ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠ ದೇವಸ್ಥಾನದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ 2018ರ ಮಾ.19ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್ ತಿಂಗಳಿನಲ್ಲಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣಾ ಹಂತದಲ್ಲಿದ್ದಾಗಲೇ ಮಾ. 19ರ ಆದೇಶ ಸಂಬಂಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ನೀಡಿದ್ದ ಮುಚ್ಚಳಿಕೆ ಆಧರಿಸಿ, ದತ್ತ ಪೀಠದ ಪೂಜಾ ವಿಧಿವಿಧಾನದ ಬಗ್ಗೆ ಯಾವುದೇ ಆತುರದ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್, ಅದನ್ನು ಕಾಲ ಕಾಲಕ್ಕೆ ವಿಸ್ತರಿಸಿಕೊಂಡು ಬಂದಿತ್ತು.
ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿತ್ತು. ಇಂದು(ಸೆ.28) ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಪೀಠ, ದತ್ತಾತ್ರೇಯ ಪೀಠ ದೇವಸ್ಥಾನದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾ.19ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
ಆಕ್ಷೇಪವೇನು?: ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಆ ವರದಿ ಆಧರಿಸಿ ಸರ್ಕಾರ ಮುಜಾವರ್ ನೇಮಕ ಮಾಡಿದೆ. ಹಿಂದುಗಳ ಪೂಜಾಸ್ಥಳದ ಧಾರ್ಮಿಕ ಆಚರಣೆಗಳನ್ನು ಮುಜಾವರ್‌ಗಳು ನಡೆಸಿಕೊಡಬೇಕು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರದ ನಿರ್ಧಾರ ಹಿಂದುಗಳ ಭಾವನೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.