ಸಂವಿಧಾನದಿಂದ ಸರ್ವರಿಗೂ ಉತ್ತಮ ಬದುಕು

Krishnappa birthday celebration
ಶಿವಮೊಗ್ಗದಲ್ಲಿ ಆಯೋಜಿಸಿದ್ದ ಡಿಎಸ್‌ಎಸ್ ಸಂಸ್ಥಾಪಕ ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಎಂಎಲ್‌ಸಿ ಬಲ್ಕಿಷ್ ಬಾನು ಪುಷ್ಪನಮನ ಸಲ್ಲಿಸಿದರು. ಡಾ. ಸಣ್ಣರಾಮ, ಸಿ.ಎಸ್.ಷಡಾಕ್ಷರಿ, ಎಂ.ಗುರುಮೂರ್ತಿ, ಹನುಮಂತಪ್ಪ ಕಾಕರಗಲ್, ಡಾ. ರತ್ಮಮ್ಮ, ಎಂ.ಏಳುಕೋಟಿ ಇತರರಿದ್ದರು.
Published on

ಶಿವಮೊಗ್ಗ: ಡಾ. ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳನ್ನು ಅಳವಡಿಕೊಳ್ಳಬೇಕು. ಉತ್ತಮ ಬದುಕು ರೂಪಿಸಿಕೊಳ್ಳುವ ಹಕ್ಕುಗಳನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಘಟಕ ಮತ್ತು ಜಿಲ್ಲಾ ಘಟಕಗಳ ಆಶ್ರಯದಲ್ಲಿ ದಸಂಸ ಸಂಸ್ಥಾಪಕ ಪ್ರೊ. ಬಿ.ಕೃಷ್ಣಪ್ಪ ಅವರ 87ನೇ ಜನ್ಮದಿನ ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ದೇಶದ ಕಾನೂನು ನಮ್ಮ ನೆರವಿಗೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೊಂಡಿರುವ ಭಾರತದತ್ತ ಇಡೀ ವಿಶ್ವ ತಿರುಗಿ ನೋಡುತ್ತಿದೆ. ಇದಕ್ಕೆ ಕಾರಣ ನಮ್ಮ ಸಂವಿಧಾನ. ಪ್ರತಿ ಕಾರ್ಯಕ್ರಮಗಳಲ್ಲೂ ಸಂವಿಧಾನದ ಪೀಠಿಕೆ ಬೋಧಿಸಬೇಕು. ಅದರಿಂದ ಸಂಘಟನೆ ಶಕ್ತಿ ವೃದ್ಧಿ ಆಗಲಿದೆ. ಸದೃಢ ಸಮಾಜ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಕಾರಣದಿಂದ ಪ್ರೊ. ಬಿ.ಕೃಷ್ಣಪ್ಪ ಅವರು ಹೋರಾಟದ ಹಾದಿ ಹಿಡಿದರು. ಅವರ ಮಾದರಿಯ್ಲಲೇ ಶಿಕ್ಷಣ, ಸಂಘಟನೆಗೆ ಹೆಚ್ಚಿನ ಒತ್ತು ನೀಡಿದರು. ಅಂತರಾಳದಲ್ಲಿ ಅಂಬೇಡ್ಕರ್ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದರು. ಅಂಬೇಡ್ಕರ್ ಅವರನ್ನೇ ಮಾದರಿಯಾಗಿ ಇಟ್ಟುಕೊಂಡಿದ್ದರು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಕರ್ನಾಟಕ ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಪ್ರೊ. ಬಿ.ಎಲ್.ರಾಜು, ಲೀಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಕುವೆಂಪು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ. ಸಣ್ಣರಾಮ, ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ರತ್ಮಮ್ಮ, ರಾಜ್ಯ ಖಜಾಂಜಿ ಬಿ.ಎ.ಕಾಟ್ಕೆ, ಸಮಿತಿ ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ಎನ್.ಮಂಜುನಾಥ, ಎಸ್.ಪಿ.ಶೇಷಾದ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net