

ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ(ಜು.26) 2 ವರ್ಷ. ಈ ಹಿನ್ನೆಲೆ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶದಲ್ಲಿಯೇ ಇಂದು ಬೆಳಗ್ಗೆ ರಾಜೀನಾಮ ಘೋಷಿಸಿದ್ದ ಬಿಎಸ್ವೈ, ಸಚಿವ ಸಂಪುಟ ಸದಸ್ಯರೊಂದಿಗೆ ಊಟ ಮಾಡಿದರು. ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಸದ್ಯ ನೂತನ ಸಿಎಂ ಆಯ್ಕೆ ಆಗುವವರೆಗೂ ಯಡಿಯೂರಪ್ಪ ಅವರೇ ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ಮಂಗಳವಾರ(ನಾಳೆ) ಬೆಳಗ್ಗೆ 9.30ಕ್ಕೆ ಬಿಜೆಪಿಯ ಪಾರ್ಲಿಮೆಂಟರಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನೂತನ ಸಿಎಂ ಯಾರು ಎಂಬುದಕ್ಕೆ ಸ್ಪಷ್ಟತೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.