

ಬೆಂಗಳೂರು: ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುಮಟಾ ಸಹಾಯಕ ಠಾಣಾಧಿಕಾರಿ ಕೆ.ಮುತ್ತಪ್ಪಗೌಡ ಅವರ ಪತ್ನಿ ಕೆ.ಎಚ್.ರತ್ನಾ ಸೇರಿದಂತೆ ವಿವಿಧ ರಕ್ಷಣಾ ಪಡೆಗಳ 236 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಲಾಯಿತು.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪದಕ ಪ್ರದಾನ ಮಾಡಿದ ನಂತರ ಮಾತನಾಡಿದ ಅವರು, ಆಂತರಿಕ ಹಾಗೂ ಬಾಹ್ಯ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ವ್ಯವಸ್ಥೆ, ವಿವಿಧ ರಕ್ಷಣಾ ಪಡೆಗಳು ಸದೃಢ, ಸನ್ನದ್ಧ ಸ್ಥಿತಿಯಲ್ಲಿ ಇರಬೇಕಾಗುತ್ತದೆ ಎಂದರು.
ಪ್ರತಿಯೊಂದು ಪಡೆಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿವೆ ಎಂದು ಶ್ಲಾಘಿಸಿದರೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಶೋಧಕ್ಕೆ ಇಲಾಖೆ ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು.